
ಚಿತ್ರದುರ್ಗ: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶನಿವಾರ ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವನಾದ ಕೂಡಲೇ ಈ ವಿಷಯವನ್ನು ಕೈಗೆತ್ತಿಕೊಂಡಿದ್ದು, ಮಂಗಳೂರಿನಲ್ಲಿ ಸಭೆ ನಡೆಸಿದ್ದೆ. ಕೊಂಕಣ ರೈಲ್ವೆಗಳನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವಂತೆ ಕೇಂದ್ರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದು, ಈ ನಿಟ್ಟಿನಲ್ಲಿ ಕೆಲಸಗಳಾಗುತ್ತಿವೆ ಎಂದು ಹೇಳಿದರು.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮನವಿ ಕುರಿತು ಮಾತನಾಡಿ, ಮಹಾರಾಷ್ಟ್ರ ಮತ್ತು ಕರ್ನಾಟಕ ಸರ್ಕಾರಗಳು NOC ನೀಡಬೇಕು. ನಂತರ ನಾವು ವಿಲೀನ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಬಹುದು ಎಂದು ತಿಳಿಸಿದರು.
ವಿಲೀನ ಕಾರ್ಯ ಸಾಮಾನ್ಯವಾಗಿ ರಾಜ್ಯದಲ್ಲಿ ಮತ್ತು ವಿಶೇಷವಾಗಿ ಕರಾವಳಿಯಲ್ಲಿ ಅಭಿವೃದ್ಧಿಗೆ ನಾಂದಿ ಹಾಡುತ್ತದೆ. ಕೊಂಕಣ ರೈಲ್ವೆ ನಿಗಮದ ಕಾರ್ಯಾಚರಣೆಗೆ ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ಕಠಿಣ ಪರಿಶ್ರಮ ಕಾರಣವಾಗಿದೆ ಎಂದು ತಿಳಿಸಿದರು.
Advertisement