
ಬೆಂಗಳೂರು: ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮತ್ತು ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇದರ ಬೆನ್ನಲ್ಲೇ ಇಬ್ಬರಿಗೂ ನೋಟಿಸ್ ಜಾರಿ ಮಾಡಲು ಹೈಗ್ರೌಂಡ್ಸ್ ಪೊಲೀಸರು ಮುಂದಾಗಿದ್ದಾರೆಂದು ತಿಳಿದುಬಂದಿದೆ.
ಭಾರತೀಯ ಯುವ ಕಾಂಗ್ರೆಸ್‌ನ ಕಾನೂನು ವಿಭಾಗದ ಮುಖ್ಯಸ್ಥ ಶ್ರೀಕಾಂತ್ ಸ್ವರೂಪ್ ಬಿ ಎನ್ ನೀಡಿದ ದೂರಿನ ಮೇರೆಗೆ ಮಂಗಳವಾರ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು) ಮತ್ತು 352 (ಶಾಂತಿ ಉಲ್ಲಂಘನೆಯನ್ನು ಪ್ರಚೋದಿವುದು) ಅಡಿಯಲ್ಲಿ ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟರ್ಕಿಯಲ್ಲಿರುವ ಇಸ್ತಾನ್‌ಬುಲ್ ಕಾಂಗ್ರೆಸ್ ಕೇಂದ್ರವು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಕಚೇರಿಯಾಗಿದೆ ಎಂದು ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಅಮಿತ್ ಮಾಳವೀಯ ಮತ್ತು ಅರ್ನಬ್ ಗೋಸ್ವಾಮಿ ದುರುದ್ದೇಶಪೂರ್ವಕವಾಗಿ ಪ್ರಚಾರ ಮಾಡಿದ್ದಾರೆ ಎಂದು ಸ್ವರೂಪ್ ಆರೋಪಿಸಿದ್ದಾರೆ.
ಅಮಿತ್ ಮಾಳವೀಯ ಮತ್ತು ಅರ್ನಬ್ ಗೋಸ್ವಾಮಿ ಅವರ ನಡೆ ಭಾರತದ ಪ್ರಜಾಪ್ರಭುತ್ವದ ಅಡಿಪಾಯ, ಸಾರ್ವಜನಿಕ ಸುರಕ್ಷತೆ ಮತ್ತು ರಾಷ್ಟ್ರೀಯ ಭದ್ರತೆಯ ಮೇಲೆ ನಡೆಸಿದ ದುರುದ್ದೇಶಪೂರ್ವಕ ದಾಳಿಯಾಗಿದೆ. ದೂರನ್ನು ತುರ್ತು ಪರಿಸ್ಥಿತಿ ಎಂದು ಪರಿಗಣಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಭಾರತೀಯ ಪತ್ರಿಕಾ ಮಂಡಳಿ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮತ್ತು ಸಿಬಿಐ ಸೇರಿದಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು.
ದೂರು ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರಿಗೂ ನೋಟಿಸ್ ಜಾರಿ, ವಿಚಾರಣೆಗೆ ಕರೆಸಲು ಸಿದ್ಧತೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಇಬ್ಬರೂ ಆರೋಪಿಗಳಿಗೆ ನೋಟಿಸ್ ನೀಡುವ ಪ್ರಕ್ರಿಯೆ ಮುಂದುವರೆದಿದ್ದು, ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಮಂಗಳವಾರ ದೂರು ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement