
ಬೆಂಗಳೂರು: ದೇಶದಲ್ಲಿ ಮತ್ತೆ ಕೋವಿಡ್ ಭೀತಿ ಶುರುವಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿಗೂ ಕೊರೋನಾ ಸೋಂಕು ವಕ್ಕರಿಸಿದೆ.
ಬೆಂಗಳೂರಿನಲ್ಲಿ ಒಂಬತ್ತು ತಿಂಗಳ ಮಗುವಿಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಮಾಹಿತಿ ನೀಡಿದ್ದಾರೆ.
ಮೇ 22 ರಂದು ರಾಪಿಡ್ ಆಂಟಿಜೆನ್ ಪರೀಕ್ಷೆ (ಆರ್‌ಎಟಿ) ಮೂಲಕ ಮಗುವಿಗೆ ಪಾಸಿಟಿವ್ ಬಂದಿದೆ. ರೋಗಿ ಸ್ಥಿರವಾಗಿದ್ದಾರೆ ಮತ್ತು ಪ್ರಸ್ತುತ ಬೆಂಗಳೂರಿನ ಕಲಾಸಿಪಾಳ್ಯದ ವಾಣಿ ವಿಲಾಸ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ್ ಗುಪ್ತಾ ತಿಳಿಸಿದ್ದಾರೆ.
ಆರೋಗ್ಯ ಇಲಾಖೆಯ ಮೂಲಗಳ ಪ್ರಕಾರ, ಮಗು ಬೆಂಗಳೂರು ಗ್ರಾಮೀಣ ಜಿಲ್ಲೆಯ ಹೊಸಕೋಟೆಯದ್ದಾಗಿದ್ದು, ಆರಂಭದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಮೇ 19 ರಂದು, ಭಾರತದಲ್ಲಿ ಒಟ್ಟು ಕೋವಿಡ್ -19 ಪ್ರಕರಣಗಳ ಸಂಖ್ಯೆ 257ರಷ್ಟಿತ್ತು. ಮೇ 21 ರಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದಲ್ಲಿ 16 ಸಕ್ರಿಯ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ ಎಂದು ದೃಢಪಡಿಸಿದರು.
ಬೆಂಗಳೂರಿನಲ್ಲಿ ಕೊರೊನಾ ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ಸ್ವಚ್ಛತೆ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ವಾಣಿವಿಲಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ
ಸೋಂಕಿಗೆ ತುತ್ತಾಗಿರುವ ಮಗುವನ್ನು ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಡಿಸಲಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮಗು ಜ್ವರದಿಂದ ಬಳಲುತ್ತಿತ್ತು. ಹೊಸಕೋಟೆಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೇ 22 ರಂದು ಕೊರೊನಾ ಪರೀಕ್ಷೆ ನಡೆಸಿದ್ದು, ಮಗುವಿಗೆ ಸೋಂಕು ಇರುವುದು ದೃಢಪಟ್ಟಿದೆ. ವೈದ್ಯರ ಶಿಫಾರಸ್ಸಿನ ಮೇರೆಗೆ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆ ಮುಂದುವರಿದಿದ್ದು, ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ರೂಪಾಂತರಿ ಅಬ್ಬರ
ಸಿಂಗಾಪುರ ಮತ್ತು ಹಾಂಕಾಂಗ್‌ನಲ್ಲಿ ಕೊರೊನಾದ ರೂಪಾಂತರಿ ಒಮಿಕ್ರಾನ್ ಜೆಎನ್1 ಉಪ ತಳಿಗಳಾದ ಎನ್‌ಬಿ.1.8 ಮತ್ತು ಎಲ್‌ಎಫ್.7 ಕೇಸ್‌ಗಳು ಹೆಚ್ಚುತ್ತಿರುವ ಬಗ್ಗೆ ವರದಿಯಾಗಿದೆ. ಮತ್ತೊಂದೆಡೆ ನೆರೆ ರಾಜ್ಯ ಕೇರಳದಲ್ಲಿ ಮೇ ತಿಂಗಳಲ್ಲಿ 182 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಕೇರಳ ಸರಕಾರವು ಕೊಟ್ಟಾಯಂ, ಎರ್ನಾಕುಲಂ ಮತ್ತು ತಿರುವನಂತಪುರ ಜಿಲ್ಲಾಡಳಿತಗಳಿಗೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. ಮತ್ತೊಂದೆಡೆ, ಆಂಧ್ರಪ್ರದೇಶದಲ್ಲಿ ಗುರುವಾರ(ಮೇ 22) 19 ಪ್ರಕರಣ ವರದಿಯಾಗಿದ್ದು, ಸದ್ಯ ಅಲ್ಲಿನ ಸರ್ಕಾರ ಮಾಸ್ಕ್ ಕಡ್ಡಾಯಗೊಳಿಸಿದೆ.
Advertisement