
ಗದಗ: ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯದ ಕಾಂಗ್ರೆಸ್ ನಾಯಕರ ಗುಂಪೊಂದು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಮಾಹಿತಿಗಳನ್ನು ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಗುರುವಾರ ಹೊಸ ಬಾಂಬ್ ಸಿಡಿಸಿದ್ದಾರೆ.
ಡಾ. ಪರಮೇಶ್ವರ್ ಅವರಿಗೆ ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವ ಕುರಿತು ಗದಗದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಇಡಿ ತನ್ನ ಕರ್ತವ್ಯವನ್ನು ನಿರ್ವಹಿಸುತ್ತಿದೆ. ಡಾ. ಪರಮೇಶ್ವರ್ ಅವರಿಗೆ ತೊಂದರೆ ನೀಡುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇಲ್ಲ. ಅವರು ಏನಾದರೂ ತಪ್ಪು ಮಾಡಿದ್ದರೆ, ಕಾನೂನು ತನ್ನದೇ ಕ್ರಮ ಕೈಗೊಳ್ಳಲಿದೆ. ನಮ್ಮ ಪಕ್ಷದಲ್ಲಿ ಬೇರೆ ಯಾರಾದರೂ ಅಪರಾಧ ಮಾಡಿದರೂ, ಅವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪರಮೇಶ್ವರ್ ಶಿಕ್ಷಣ ಸಂಸ್ಥೆ ಮೇಲಿನ ಇಡಿ ದಾಳಿ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ ಇದೆ. ಪರಮೇಶ್ವರ್ ವಿರುದ್ಧ ಕಾಂಗ್ರೆಸ್ನ ಒಂದು ಗುಂಪು ದೂರು ನೀಡಿದೆ. ಹೀಗಾಗಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 2013ರಲ್ಲಿ ಡಾ.ಜಿ.ಪರಮೇಶ್ವರ್ರನ್ನು ಸೋಲಿಸಿದ್ದು ಯಾರು? ಡಾ.ಜಿ.ಪರಮೇಶ್ವರ್ರನ್ನು ಇದೇ ಸಿದ್ದರಾಮಯ್ಯ ಸೋಲಿಸಿದ್ದರು.
ಚಿನ್ನ ಕಳ್ಳತನ ಸೇರಿ ಎಲ್ಲಾ ಪ್ರಕರಣಗಳ ಬಗ್ಗೆ ತನಿಖೆ ಮಾಡುವಂತೆ ಇಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದು ಯಾರು? ನಮಗೆ ಪರಮೇಶ್ವರ್ ಮೇಲೆ ಗೌರವ ಇದೆ, ಸಭ್ಯ ರಾಜಕಾರಣಿ. ಏನಾಗಿದೆ ಅನ್ನೋದನ್ನು ಇಡಿ ಅಧಿಕಾರಿಗಳು ಹುಡುಕುತ್ತಿದ್ದಾರೆ ಎಂದರು.
ಕಾಂಗ್ರೆಸ್ನ ಒಂದು ಗುಂಪು ಮಾಹಿತಿ ಕಳಿಸಿದ್ದಾರೆಂಬ ಆರೋಪವಿದೆ. ಯಾರು ಕಳುಹಿಸಿದ್ದಾರೆಂದು ಸಿಎಂ ಸಿದ್ದರಾಮಯ್ಯಗೂ ಗೊತ್ತಿದೆ. ಮಾಹಿತಿ ಸಿಕ್ಕಾಗ ಇಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತದೆ. ಯಾರೇ ತಪ್ಪು ಮಾಡಿದರೂ ಕಾನೂನು ಕ್ರಮ ಆಗಲಿದೆ ಎಂದು ತಿಳಿಸಿದರು.
ಇದೇ ವೇಳೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದರು.
Advertisement