
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಚಲಾಯಿಸುತ್ತಿದ್ದ ತಂದೆ ಮತ್ತು ಮಗಳು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುತ್ತೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್, ಕೆದಿಲ ಕಡೆಗೆ ಬಲಕ್ಕೆ ತಿರುಗುತ್ತಿದ್ದಾಗ ಕಾರಿಗೆ ಡಿಕ್ಕಿ ಹೊಡೆದಿದೆ. ಮುರಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.
ಓವರ್‌ಟೇಕ್ ಮಾಡಲು ಪ್ರಯತ್ನಿಸುತ್ತಿದ್ದಾಗ ಬಸ್ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮವಾಗಿ ವಾಹನ ಪಲ್ಟಿಯಾಗಿದೆ. ಅಪಘಾತದಲ್ಲಿ ಕಾರು ತೀವ್ರವಾಗಿ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಈ ವೇಳೆ ತಂದೆ ಮತ್ತು ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಆದರೆ, ಅವರೊಂದಿಗೆ ಪ್ರಯಾಣಿಸುತ್ತಿದ್ದ ಮಗುವೊಂದು ಯಾವುದೇ ಗಾಯಗಳಿಲ್ಲದೆ ಪಾರಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪೊಲೀಸರು ಸಂತ್ರಸ್ತರ ಗುರುತು ಮತ್ತು ವಯಸ್ಸಿನ ಬಗ್ಗೆ ಪರಿಶೀಲಿಸುತ್ತಿದ್ದಾರೆ.
Advertisement