ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ: ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಹುಬ್ಬಳ್ಳಿ ಗಲಭೆ ಸೇರಿದಂತೆ 43 ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು.
High Court and CM Siddaramaiah Casual Images
ಹೈಕೋರ್ಟ್, ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: 2022ರಲ್ಲಿ ಹಳೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಗೊಳಿಸಿದೆ. ಇದರಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.

ಹುಬ್ಬಳ್ಳಿ ಗಲಭೆ ಸೇರಿದಂತೆ 43 ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಅದರಂತೆ ಅಕ್ಟೋಬರ್ 2024 ರಲ್ಲಿ ಮಾಜಿ ಸಚಿವರು, ಮಾಜಿ ಶಾಸಕರು, ವಿವಿಧ ಸಂಘಟನೆಗಳ ಹೋರಾಟಗಾರರು ಮತ್ತು ಪ್ರಭಾವಿ ಸಂಸ್ಥೆಗಳಿಗೆ ಸೇರಿದ ವ್ಯಕ್ತಿಗಳ ವಿರುದ್ಧದ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಆದೇಶ ಹೊರಡಿಸಲಾಗಿತ್ತು.

ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಹೈಕೋರ್ಟ್​ ದ್ವಿಸದಸ್ಯ ಪೀಠ ಇಂದು ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

High Court and CM Siddaramaiah Casual Images
ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್: ರಾಜ್ಯ ಸರ್ಕಾರದ ವಿರುದ್ಧ BJP ತೀವ್ರ ಕಿಡಿ, ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹ

ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ವಿಷಯಕ್ಕೆ ಸಂಬಂಧಿಸಿದಂತೆ ಹಲವಾರು ಪೊಲೀಸ್ ಸಿಬ್ಬಂದಿಯ ಮೇಲೆ ಗುಂಪೊಂದು ದಾಳಿ ನಡೆಸಿ ಹಲ್ಲೆ ನಡೆಸಿದ್ದ 2022ರ ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ ಈ 43 ಪ್ರಕರಣಗಳಲ್ಲಿ ಕೆಲವು ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆ, 1967, ಸಾರ್ವಜನಿಕ ಆಸ್ತಿ ನಾಶ ತಡೆ ಕಾಯ್ದೆ, 1984 ಮತ್ತು ಧಾರ್ಮಿಕ ಸಂಸ್ಥೆ(ದುರುಪಯೋಗ ತಡೆ) ಕಾಯ್ದೆ, 1988ರ ಅಡಿಯಲ್ಲಿ ಗಂಭೀರ ಆರೋಪಗಳನ್ನು ಹೊರಿಸಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.

ಅಕ್ಟೋಬರ್ 15, 2024 ರ ಸರ್ಕಾರಿ ಆದೇಶವು ಕ್ರಿಮಿನಲ್ ಪ್ರೊಸೀಜರ್ ಕೋಡ್ ನ ಸೆಕ್ಷನ್ 321 ರ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ಈ ನಿಬಂಧನೆಯು ನಿರ್ದಿಷ್ಟವಾಗಿ ಪ್ರಾಸಿಕ್ಯೂಟರ್‍ಗೆ ಮಾತ್ರ ಕಾನೂನು ಕ್ರಮದಿಂದ ಹಿಂದೆ ಸರಿಯಲು ಯಾವುದೇ ಕ್ರಮವನ್ನು ಪ್ರಾರಂಭಿಸುವ ಅಧಿಕಾರವನ್ನು ನೀಡುತ್ತದೆ. ಆದ್ದರಿಂದ, ಈ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಪ್ರಾಸಿಕ್ಯೂಟರ್‍ ನಿರ್ದೇಶನ ನೀಡುವ ಅಧಿಕಾರ ರಾಜ್ಯ ಸಚಿವ ಸಂಪುಟಕ್ಕೆ ಇಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.

ವಾದ-ಪ್ರತಿವಾದ ಆಲಿಸಿದ ಕೋರ್ಟ್, ಸಚಿವ ಸಂಪುಟದ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪುವುದಿಲ್ಲ. ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ. ಅರ್ಜಿದಾರರ ಪರ ವಕೀಲರು ಪ್ರಭಾವಿ ವ್ಯಕ್ತಿಗಳೂ ಸೇರಿದಂತೆ ಕೆಲವು ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳನ್ನು ಅಪರಾಧ ದಂಡ ಸಂಹಿತೆ ಸೆಕ್ಷನ್‌ 321ಕ್ಕೆ ವಿರುದ್ಧವಾಗಿ ಸರ್ಕಾರ ಹಿಂಪಡೆದಿದೆ ಎಂದು ಹೇಳಿರುವುದು ಮೇಲ್ನೋಟಕ್ಕೆ ಸಮರ್ಥನೀಯವಾಗಿದೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com