
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಮೇಲುಗೈ ಸಾಧಿಸಬೇಕು ಮತ್ತು ದ್ವೇಷ ಕೊನೆಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಒತ್ತಾಯಿಸಿದ್ದಾರೆ.
ಮೇ 27ರಂದು ಬಂಟ್ವಾಳದಲ್ಲಿ ನಡೆದ ಯುವಕನ ಹತ್ಯೆಯ ನಂತರ ಕರಾವಳಿ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟಾಗಿದೆ. ಮೇ 30ರವರೆಗೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕಾಂಗ್ರೆಸ್ ಎಂಎಲ್‌ಸಿ ಬಿಕೆ ಹರಿಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿ, ದಕ್ಷಿಣ ಕನ್ನಡ ಜಿಲ್ಲೆಯ ಸದ್ಯದ ಪರಿಸ್ಥಿತಿಯ ಕುರಿತು ಚರ್ಚೆ ನಡೆಸಿದರು.
'ಮಂಗಳೂರಿನಲ್ಲಿನ ಸದ್ಯದ ಪರಿಸ್ಥಿತಿ ಬಗ್ಗೆ ನಾವು ಚರ್ಚೆ ನಡೆಸಿದ್ದೇವೆ. ಆ ಪ್ರದೇಶದಲ್ಲಿ ಕೋಮು ಸಾಮರಸ್ಯ ಇರಬೇಕು. ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಯಾವುದೇ ದ್ವೇಷ ಇರಬಾರದು. ನಾವು ಅಲ್ಲಿ ಸಾಮರಸ್ಯವನ್ನು ತರಬೇಕು. ಅದಕ್ಕಾಗಿ ನಾವು ಚರ್ಚೆ ನಡೆಸಿದ್ದೇವೆ' ಎಂದು ಹರಿಪ್ರಸಾದ್ ಅವರ ಮನೆಗೆ ಭೇಟಿ ನೀಡಿದ ನಂತರ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.
ಹರಿಪ್ರಸಾದ್ ಅವರನ್ನು ಮಂಗಳೂರಿಗೆ ಭೇಟಿ ನೀಡುವಂತೆ ಕೇಳಿಕೊಂಡಿದ್ದೇನೆ ಎಂದು ಅವರು ಹೇಳಿದರು.
ದಕ್ಷಿಣ ಕನ್ನಡದಲ್ಲಿ ನಡೆದ ಸೇಡಿನ ಹತ್ಯೆಗಳ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, 'ಅದರಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರ ಮೇಲೂ ನಾವು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ. ಆ ವ್ಯಕ್ತಿ ಎಷ್ಟೇ ಪ್ರಭಾವಿಯಾಗಿದ್ದರೂ ಸಹ. ಯಾರೂ ಕಾನೂನಿಗಿಂತ ಮೇಲಲ್ಲ. ಕಾನೂನು ಮಾತ್ರ ಎಲ್ಲಕ್ಕಿಂತ ಮೇಲಿರುತ್ತದೆ' ಎಂದು ಹೇಳಿದರು.
ಕೋಮು ವಿರೋಧಿ ಕಾರ್ಯಪಡೆ ರಚಿಸಲಾಗುತ್ತದೆಯೇ ಎಂದು ಕೇಳಿದಾಗ, ಅದರ ಬಗ್ಗೆ ಚರ್ಚಿಸುವುದಾಗಿ ಹೇಳಿದರು.
ರಾಜ್ಯದಲ್ಲಿ ಮಳೆ ಪರಿಸ್ಥಿತಿ ಕುರಿತು ಶುಕ್ರವಾರ ಜಿಲ್ಲಾ ಉಪ ಆಯುಕ್ತರು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಸಭೆಗೆ ಸಚಿವರು ಮತ್ತು ಕಾರ್ಯದರ್ಶಿಗಳು ಸಹ ಹಾಜರಾಗಲಿದ್ದಾರೆ.
ರಹೀಂ ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಶಂಕಿತರಾದ ದೀಪಕ್ ಮತ್ತು ಸುಮಿತ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೇ 1 ರಂದು ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಬೆನ್ನಲ್ಲೇ ಈ ಹತ್ಯೆ ನಡೆದಿದೆ.
Advertisement