
ಬೆಂಗಳೂರು: ವಿದ್ಯುತ್ ಸಂಪರ್ಕ ಪಡೆಯಲು ಆಕ್ಯುಪೆನ್ಸಿ ಸರ್ಟಿಫಿಕೇಟ್ (OC) ಪಡೆಯಬೇಕೆಂಬ ಆದೇಶವನ್ನು ತೆಗೆದುಹಾಕುವ ಕುರಿತು ಮುಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ ಹೇಳಿದರು.
ಗುರುವಾರ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಅನುಸರಿಸಿ ಆಕ್ಯುಪೆನ್ಸಿ ಸರ್ಟಿಫಿಕೇಟ್ ಪಡೆಯಬೇಕೆಂಬ ನಿಯಮವನ್ನು ಸರ್ಕಾರ ಕಡ್ಡಾಯಗೊಳಿಸಿದೆ. ನಿಯಮದಿಂದ ಸಮಸ್ಯೆಗಳು ಎದುರಾಗಿದ್ದು, ಅದನ್ನು ಪರಿಹರಿಸಲು ಕಾನೂನು ತಿದ್ದುಪಡಿಯನ್ನು ಪರಿಗಣಿಸಲಾಗುತ್ತಿದೆ. ಈ ವಿಷಯವನ್ನು ಇತ್ತೀಚೆಗೆ ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಲಾಯಿತು, ಅಲ್ಲಿ ಪರಿಹಾರ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ, ಅವರು ವರದಿ ಸಲ್ಲಿಸಿದ ಕೂಡಲೇ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡು ಸಮಸ್ಯೆ ನಿವಾರಿಸಲಾಗುವುದು ಎಂದು ಹೇಳಿದರು.
ಗೃಹ ಜ್ಯೋತಿ ಯೋಜನೆಯಿಂದ ಸಾಕಷ್ಟು ಅನುಕೂಲವಾಗಿದೆಯಾದರೂ ಬಾಡಿಗೆ ಮನೆ ಬದಲಿಸುವಾಗ ಹಳೆಯ ಆರ್ ಆರ್ ನಂಬರ್ಗೆ ಡಿ-ಲಿಂಕ್ ಮಾಡಿ ಹೊಸ ಆರ್ ಆರ್ ನಂಬರ್ಗೆ ಲಿಂಕ್ ಮಾಡುವ ವೇಳೆ ಸಮಸ್ಯೆಯಾಗುತ್ತಿದೆ ಎಂಬ ಪಕ್ಷದ ಕಾರ್ಯಕರ್ತರ ಪ್ರಶ್ನೆಗೆ ಉತ್ತರಿಸಿ, ಆನ್ಲೈನ್ ಮೂಲಕವೇ ಡಿ-ಲಿಂಕ್ ಮತ್ತು ಲಿಂಕ್ ವ್ಯವಸ್ಥೆ ಮಾಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಒಂದೊಮ್ಮೆ ನಿರ್ದಿಷ್ಟ ವ್ಯಕ್ತಿಗಳಿಗೆ ಸಮಸ್ಯೆ ಕಾಣಿಸಿಕೊಂಡರೆ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದರು.
Advertisement