
ಬೆಂಗಳೂರು: ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯಿಂದ ತುಮಕೂರು ಭಾಗದ ರೈತರಿಗೆ ಅನ್ಯಾಯವಾಗುತ್ತಿದ್ದು, ತಕ್ಷಣ ಯೋಜನೆಯ ಕಾಮಗಾರಿಯನ್ನು ನಿಲ್ಲಿಸುವಂತೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯ ಸರ್ಕಾರಕ್ಕೆ ಗುರುವಾರ ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯು ತುಮಕೂರು ಭಾಗದ ರೈತರಿಗೆ ಶಾಪವಾಗಿ ಪರಿಣಮಿಸಲಿದೆ. ಈ ಕೆನಾಲ್ ನಿರ್ಮಾಣದಿಂದ ಹೈಡ್ರಾಲಿಕ್ ಹೆಡ್ ಕುಸಿದು ಸಕಾಲದಲ್ಲಿ ನೀರು ಪೂರೈಕೆಯಲ್ಲಿ ಕೊರತೆಯಾಗುವ ಆತಂಕದ ಬಗ್ಗೆ ಈ ಭಾಗದ ರೈತರು/ತಂತ್ರಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ರಾಜ್ಯ ಸರ್ಕಾರ ಈ ಬಗ್ಗೆ ಮೃದು ಧೋರಣೆ ತಳೆದಿರುವುದು ಖಂಡನೀಯ ಎಂದು ಹೇಳಿದ್ದಾರೆ.
ತುಮಕೂರಿನ ರೈತರ ನೆಮ್ಮದಿ ಕೆಡಿಸುವ ಈ ಅವೈಜ್ಞಾನಿಕ ಯೋಜನೆಯ ಕಾಮಗಾರಿಯನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಈ ಕಾಮಗಾರಿ ನಡೆಸುತ್ತಿರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇದೇ ವೇಳೆ ಮೇ 31, 2025ರ ಒಳಗಾಗಿ ಯೋಜನೆ ವಾಪಾಸು ಪಡೆಯದಿದ್ದಲ್ಲಿ ಮುಂದೆ ಉದ್ಭವಿಸುವ ತೊಂದರೆಗಳಿಗೆ ರಾಜ್ಯ ಸರ್ಕಾರವೇ ಸಂಪೂರ್ಣ ಹೊಣೆಯಾಗಬೇಕಾಗುತ್ತದೆ ಎಂದೂ ಎಚ್ಚರಿಸಿದ್ದಾರೆ.
Advertisement