
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರಿ ಮಳೆಯಾಗುತ್ತಿರುವುದರಿಂದ ನೇತ್ರಾವತಿ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಂಟ್ವಾಳ ತಾಲ್ಲೂಕಿನ ತಗ್ಗು ಪ್ರದೇಶಗಳ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ನೇತ್ರಾವತಿ ನದಿ ನೀರಿನ ಅಪಾಯದ ಮಟ್ಟ 8.5 ಮೀಟರ್ ಆಗಿದ್ದು, ಇಂದು ಬೆಳಗ್ಗೆ 7.6 ಮೀಟರ್ ಎತ್ತರದಲ್ಲಿ ನೀರು ಹರಿಯುತ್ತಿದೆ.
ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಬಳಿ ನದಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ಪಾಣೆ ಮಂಗಳೂರು ಪುರಸಭೆಯ 24ನೇ ವಾರ್ಡ್ ನ ಆಲಡ್ಕಪಡ್ಪುವಿನಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿದ್ದ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.
ಕಂದಾಯ ಅಧಿಕಾರಿಗಳು, ವಾರ್ಡ್ ಸದಸ್ಯ ಸಿದ್ದಿಕ್ ಗುಡ್ಡೆಯಂಗಡಿ ಮತ್ತು ಸ್ಥಳೀಯ ಸ್ವಯಂಸೇವಕರು, ಸಂತ್ರಸ್ತ ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಸಹಾಯ ಮಾಡಿದರು.
ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ಮಳೆ ಮುಂದುವರಿದರೆ ಮತ್ತು ನೀರಿನ ಮಟ್ಟ ಹೆಚ್ಚುತ್ತಲೇ ಇದ್ದರೆ ಹೆಚ್ಚಿನ ಪ್ರದೇಶಗಳಿಗೆ ನೀರು ನುಗ್ಗುವ ಸಂಭವವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹತ್ತಿರದ ಅಣೆಕಟ್ಟುಗಳಿಂದ ನೀರನ್ನು ಹೊರ ಬಿಡುತ್ತಿರುವುದು ಸಹ ನೇತ್ರಾವತಿ ನದಿ ನೀರಿನ ಮಟ್ಟ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Advertisement