HMT ಡಿನೋಟಿಫಿಕೇಷನ್ ಕೇಸ್: IFS ಅಧಿಕಾರಿಗಳ ಅಮಾನತಿಗೆ ರಾಜ್ಯ ಸರ್ಕಾರ ಶಿಫಾರಸು

ಹೆಚ್‌ಎಂಟಿ ವಶದಲ್ಲಿರುವ ಭೂಮಿ, ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಆಗಿಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ನೀಡಿರುವ ಹಲವು ತೀರ್ಪು ಮತ್ತು ಅರಣ್ಯ ಸಂರಕ್ಷಣಾ ಕಾಯಿದೆ 1980ರ ಪ್ರಕಾರ ಇಂದಿಗೂ ಇದು ಅರಣ್ಯವೇ ಆಗಿರುತ್ತದೆ.
Eshwar Khandre
ಈಶ್ವರ್ ಖಂಡ್ರೆ
Updated on

ಬೆಂಗಳೂರು: ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಗಳಿಗಾಗಿ ಪರಿವರ್ತಿಸಿದ ಹಿನ್ನೆಲೆಯಲ್ಲಿ ಭಾರತೀಯ ಅರಣ್ಯ ಸೇವೆ (IFS) ಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲು ಮತ್ತು ಇಬ್ಬರು ನಿವೃತ್ತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಶಿಫಾರಸು ಮಾಡಿರುವುದಾಗಿ ಸಚಿವ ಈಶ್ವರ್ ಖಂಡ್ರೆ ಅವರು ಶುಕ್ರವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್‌ಎಂಟಿ ವಶದಲ್ಲಿರುವ ಭೂಮಿ, ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಆಗಿಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ನೀಡಿರುವ ಹಲವು ತೀರ್ಪು ಮತ್ತು ಅರಣ್ಯ ಸಂರಕ್ಷಣಾ ಕಾಯಿದೆ 1980ರ ಪ್ರಕಾರ ಇಂದಿಗೂ ಇದು ಅರಣ್ಯವೇ ಆಗಿರುತ್ತದೆ. ಈ ಭೂಮಿ ಪರಭಾರೆ ಆಗಿದೆ. ರಿಯಲ್ ಎಸ್ಟೇಟ್ ಸಂಸ್ಥೆಗಳು ನೂರಾರು ಫ್ಲಾಟ್ ಕಟ್ಟಿದ್ದಾರೆ. ಧಾರಾವಾಹಿ, ಚಲನಚಿತ್ರಗಳ ಚಿತ್ರೀಕರಣ ನಡೆಯುತ್ತಿದೆ. ವಾಣಿಜ್ಯ ಉದ್ದೇಶಕ್ಕೆ ಭೂಮಿ ಬಳಕೆ ಆಗುತ್ತಿದೆ. ಇದಕ್ಕೆ ಹೇಗೆ ಅವಕಾಶ ನೀಡಲಾಗಿದೆ ಎಂಬುದೇ ಪ್ರಶ್ನಾರ್ಥಕವಾಗಿದೆ ಎಂದು ಹೇಳಿದರು.

ಹೆಚ್ಎಂಟಿ ವಶದಲ್ಲಿರುವ ಅರಣ್ಯಭೂಮಿ 7 ಕೋಟಿ ಕನ್ನಡಿಗರ ಆಸ್ತಿ, ಇದನ್ನು ಕೆಲವೇ ಕೆಲವು ಅಧಿಕಾರಿಗಳು ಅಂದಿನ ಅರಣ್ಯ ಸಚಿವರ ಗಮನಕ್ಕೂ ತಾರದೆ, ಸಚಿವ ಸಂಪುಟದ ಪೂರ್ವಾನುಮತಿ ಪಡೆಯದೆ ಡಿನೋಟಿಫಿಕೇಷನ್​ಗೆ ಅರ್ಜಿ ಸಲ್ಲಿಸಿದ್ದಾರೆ. ಇಬ್ಬರು ನಿವೃತ್ತ ಮತ್ತು ಇಬ್ಬರು ಹಾಲಿ ಸೇರಿ 4 ಅಧಿಕಾರಿಗಳಿಗೆ ನೋಟಿಸ್ ನೀಡಿದ್ದು, ಕ್ರಮಕ್ಕೆ ತಾವು ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಿರುವುದಾಗಿ ತಿಳಿಸಿದರು.

ಅಪರ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಆರ್.ಗೋಕುಲ್ ತಾವು ಬೇಲಿಕೇರಿ ಪ್ರಕರಣದಲ್ಲಿ ಆಡಳಿತ ಪಕ್ಷದ ಶಾಸಕರಿಗೆ ಶಿಕ್ಷೆ ಆಗುವಂತೆ ಮಾಡಿದ ಕಾರಣ ತಮ್ಮನ್ನು ಬಲಿ ಪಶು ಮಾಡಲಾಗುತ್ತಿದೆ ಎಂದು ತಿಳಿಸಿ, ರಕ್ಷಣೆ ಕೋರಿ ಸಿಬಿಐಗೆ ಪತ್ರ ಬರೆದಿದ್ದಾರೆ. ಸರ್ಕಾರ ಅಧಿಕಾರಿಗಳನ್ನು ಬಲಿಪಶು ಮಾಡುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಇದು ಸರ್ಕಾರದ ವಿರುದ್ಧ ಮಾಡಿರುವ ಸಂಪೂರ್ಣ ಸುಳ್ಳು ಆರೋಪ ಎಂದರು.

2024ರ ಸೆಪ್ಟೆಂಬರ್ 24ರಂದು ತಾವು ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಟಿಪ್ಪಣಿ ಕಳಿಸಿ, ಸಚಿವ ಸಂಪುಟದ ಪೂರ್ವಾನುಮತಿ ಇಲ್ಲದೆ ಐಎ ಹಾಕಿರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ.

Eshwar Khandre
HMT ಭೂ ವಿವಾದ: 433 ಎಕರೆ ಭೂಮಿ ಹಿಂಪಡೆಯಲು ಕರ್ನಾಟಕ ಸಚಿವ ಸಂಪುಟ ಅನುಮೋದನೆ

ಸೂಚನೆ ನೀಡಿದ ಒಂದು ತಿಂಗಳ ನಂತರ ಅಕ್ಟೋಬರ್ 2024ರಲ್ಲಿ ಬೇಲಿಕೇರಿ ತೀರ್ಪು ಬಂದಿದೆ. ಆರ್. ಗೋಕುಲ್ ತಮ್ಮ ತಪ್ಪು ಮುಚ್ಚಿಕೊಳ್ಳಲು ಸರ್ಕಾರದ ವಿರುದ್ಧ ಸಿಬಿಐಗೆ ಸುಳ್ಳು ಆರೋಪ ಮಾಡಿ ಪತ್ರ ಬರೆದಿದ್ದಾರೆ. ಇದು ಕೂಡ ಅಧಿಕಾರಿಯ ದುರ್ವರ್ತನೆ ಆಗುತ್ತದೆ ಅಥವಾ ಬೆದರಿಕೆಯ ತಂತ್ರ ಎಂದು ಭಾವಿಸಬಹುದಾಗಿದೆ ಎಂದು ಹೇಳಿದರು.

ಹೆಚ್‌ಎಂಟಿ ಅರಣ್ಯ ಭೂಮಿ ಪ್ರದೇಶಕ್ಕೆ ಸ್ವತಃ ತಾವೇ ಖುದ್ದು ಭೇಟಿ ನೀಡಿ, ಅಲ್ಲಿ ಇಂದಿಗೂ 280 ಎಕರೆಯಷ್ಟು ನೆಡುತೋಪು ಇದೆ. ಅದಾಗ್ಯೂ, ಸದರಿ ಭೂಮಿ ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸುಪ್ರೀಂಕೋರ್ಟ್ಗೆ ಸುಳ್ಳು ಮಾಹಿತಿ ನೀಡಿ ಐಎ ಸಲ್ಲಿಸಲಾಗಿದೆ. ತಮ್ಮ ರಕ್ಷಣೆಗೆ ಸಿಬಿಐಗೆ ಪತ್ರ ಬರೆಯುವ ಅಧಿಕಾರಿ, ಹೆಚ್‌ಎಂಟಿ ಭೂಮಿಯಲ್ಲಿ ಅರಣ್ಯವಿದೆ. ಇದು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಐಎ ಸಲ್ಲಿಸಲು ಬರುವುದಿಲ್ಲ ಎಂದು ಸಿಎಂಗೇಕೆ ಪತ್ರ ಬರೆಯಲಿಲ್ಲ ಎಂದು ಪ್ರಶ್ನಿಸಿದರು.

ಬೆಂಗಳೂರಿನಲ್ಲಿ ಇತರ ಸಂಸ್ಥೆಗಳ ವಶದಲ್ಲಿರುವ ಅರಣ್ಯಭೂಮಿ ಕುರಿತಂತೆ ಚರ್ಚಿಸಿ ಸರ್ಕಾರಕ್ಕೆ ಶಿಫಾರಸು ಮಾಡಲು 2015ರಲ್ಲೇ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿತ್ತು. ಆ ಸಮಿತಿಯ ಗಮನಕ್ಕೆ ಸಹ ತಾರದೆ, ಸಚಿವ ಸಂಪುಟದ ಅನುಮತಿ ಇಲ್ಲದೆ ಸುಪ್ರೀಂ ಕೋರ್ಟ್ನಲ್ಲಿ ಡಿನೋಟಿಫಿಕೇಷನ್ ಅನುಮತಿ ಕೋರಿ 2020ರ ಜೂನ್ 20ರಂದು ಅರ್ಜಿ ಸಲ್ಲಿಸಲಾಗಿದೆ.

ಕೇವಲ 25 ದಿನಗಳ ಅಂತರದಲ್ಲಿ ಅಂದರೆ 2020 ಆ. 25ರಂದು ಉನ್ನತ ಮಟ್ಟದ ಸಭೆಯಲ್ಲಿ `1980ರ ಪೂರ್ವದಲ್ಲಿ ವಿವಿಧ/ಸರ್ಕಾರಿ ಸಂಸ್ಥೆಗಳಿಗೆ ಆದ ಪ್ರದೇಶಗಳ ಮಂಜೂರಾತಿಗಳ ಬಗ್ಗೆ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯ ಪಡೆದು ಅಂತಹ ಅರಣ್ಯಪ್ರದೇಶಗಳ ಡಿನೋಟಿಫಿಕೇಶನ್‌ನ ಪ್ರಸ್ತಾವನೆಯನ್ನು ಕ್ಯಾಬಿನೆಟ್ ನಿರ್ಧಾರಕ್ಕಾಗಿ ಸಲ್ಲಿಸಲು ಅಪರ ಮುಖ್ಯ ಕಾರ್ಯದರ್ಶಿ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆರವರಿಗೆ ಸೂಚಿಸಿದೆ’ ಎಂಬ ನಿರ್ಣಯ ಮಾಡಲಾಗಿದೆ. ಈ ಬಗ್ಗೆ ಘಟನೋತ್ತರ ಅನುಮತಿ ಪಡೆದಿಲ್ಲ. ಹೀಗಾಗಿ 4 ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿತ್ತು.

ಈಗ ಗೋಕುಲ್ ಅವರನ್ನು ಅಮಾನತು ಮಾಡಿ ವಿಚಾರಣೆ ನಡೆಸಲು, ಮತ್ತೊಬ್ಬ ಅಧಿಕಾರಿ ವಿರುದ್ಧ ಇಲಾಖಾ ವಿಚಾರಣೆ ನಡೆಸಲು ಹಾಗೂ ನಿವೃತ್ತಿ ಐಎಎಸ್ ಅಧಿಕಾರಿ ಮತ್ತು ಐಎಫ್‌ಎಸ್ ಅಧಿಕಾರಿ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲು ಸಿಎಂಗೆ ಕಡತ ಸಲ್ಲಿಸಲಾಗಿದೆ. ಈ ವಿಷಯ ತಮ್ಮ ಗಮನಕ್ಕೆ ಬಂದ ಕೂಡಲೇ ಐಎ ಹಿಂಪಡೆಯಲು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಐಎ ಹಿಂಪಡೆಯಲು ಸಚಿವ ಸಂಪುಟದ ಅನುಮತಿಯನ್ನೂ ಪಡೆಯಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com