

ಬೆಂಗಳೂರು: ಬೆಳಗಾವಿ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಎರಡು ಆನೆಗಳು ಸಾವಿಗೀಡಾಗಿರುವ ಘಟನೆಯ ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೋಮವಾರ ಆದೇಶಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಖಾನಾಪುರ ಬಳಿಯ ಸುಲೈಗಲಿ ಗ್ರಾಮದಲ್ಲಿ ಭಾನುವಾರ ಈ ಘಟನೆ ಸಂಭವಿಸಿದೆ.
ಈ ಘಟನೆಯನ್ನು 'ದುರದೃಷ್ಟಕರ' ಎಂದು ಬಣ್ಣಿಸಿದ ಸಚಿವರು, ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಆನೆಗಳು ಇದ್ದರೂ, ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದೆ ಅರಣ್ಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪಗಳನ್ನು ಉಲ್ಲೇಖಿಸಿದ್ದಾರೆ.
ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಐದು ದಿನಗಳಲ್ಲಿ ವಿವರವಾದ ವರದಿಯನ್ನು ಸಲ್ಲಿಸುವಂತೆ ಮತ್ತು ಯಾವುದೇ ಲೋಪಗಳು ಕಂಡುಬಂದರೆ ಶಿಸ್ತು ಕ್ರಮಕ್ಕೆ ಶಿಫಾರಸುಗಳನ್ನು ಸಲ್ಲಿಸುವಂತೆ ಸಚಿವರು ಮುಖ್ಯ ವನ್ಯಜೀವಿ ವಾರ್ಡನ್‌ಗೆ ನಿರ್ದೇಶಿಸಿದ್ದಾರೆ.
ಬೇಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವುದಾಗಿ ಖಂಡ್ರೆ ಎಚ್ಚರಿಸಿದ್ದು, ವಿದ್ಯುತ್ ಸಂಪರ್ಕ ನೀಡಿದ್ದರಿಂದಾಗಿಯೇ ಆನೆಗಳ ಸಾವು ಸಂಭವಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
Advertisement