

ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡುವಂತೆ ಒತ್ತಾಯಿಸಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ ನಾಯಕ ಆರ್ ಅಶೋಕ, ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ರಾಜೀನಾಮೆ ನೀಡಲಿ ಎಂದು ಶುಕ್ರವಾರ ಒತ್ತಾಯಿಸಿದ್ದಾರೆ.
ಕೇಂದ್ರವನ್ನು ದೂಷಿಸಿದ್ದಕ್ಕಾಗಿ ಮುಖ್ಯಮಂತ್ರಿಯನ್ನು ಟೀಕಿಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ, '7 ದಿನಗಳಿಂದ ಸಾವಿರಾರು ಕಬ್ಬು ಬೆಳೆಗಾರರು ಬೀದಿಗಿಳಿದಿದ್ದಾರೆ. ಆದರೆ, ಸಿಎಂ ಸಿದ್ದರಾಮಯ್ಯ ಅವರ ಮುಂದಿರುವ ಒಂದೇ ಒಂದು ಪರಿಹಾರವೆಂದರೆ: ಕೇಂದ್ರವನ್ನು ದೂಷಿಸುವುದು. ವಿರೋಧ ಪಕ್ಷದಲ್ಲಿದ್ದಾಗ ಅವರು ದೊಡ್ಡ ದೊಡ್ಡ ಉಪದೇಶಗಳನ್ನು ನೀಡುತ್ತಿದ್ದರು. ಈಗ ಅವರು ನೆಪಗಳ ಹಿಂದೆ ಅಡಗಿಕೊಂಡು ರೈತರನ್ನು ಕೈಬಿಡುತ್ತಿದ್ದಾರೆ. ನಿಮಗೆ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ ಮತ್ತು ಹೊರಡಿ' ಎಂದು 'X' ನಲ್ಲಿ ಪೋಸ್ಟ್ ಮಾಡಿದ್ದಾರೆ.
'FRP ಅಲ್ಲದೆ ಟನ್‌ಗೆ 500 ರೂ. ಪ್ರೋತ್ಸಾಹ ಧನ, 5,000 ಕೋಟಿ ರೂ. ರಿವಾಲ್ವಿಂಗ್ ಫಂಡ್ ಅನ್ನು ನಾವು ಬೇಡಿಕೆ ಇಡುತ್ತೇವೆ ಮತ್ತು ತಕ್ಷಣದ ಹಸ್ತಕ್ಷೇಪ ಬೇಕಾಗಿದೆಯೇ ಹೊರತು ಪತ್ರಿಕಾಗೋಷ್ಠಿಗಳಲ್ಲ' ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ತಪ್ಪು ನೀತಿ ಮತ್ತು ರಾಜ್ಯದ ರೈತರ ಜೀವನದೊಂದಿಗೆ ಚೆಲ್ಲಾಟವಾಡುತ್ತಿರುವ ಪರಿಣಾಮವಾಗಿಯೇ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಜೆಪಿಯವರು ತಪ್ಪು ಮಾಹಿತಿ ನೀಡಿ ರೈತರ ದಾರಿ ತಪ್ಪಿಸುತ್ತಿದ್ದಾರೆ ಎಂದು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಯುತ ಮತ್ತು ಲಾಭದಾಯಕ ದರ (FRP) ನಿಗದಿ ಮಾಡುವುದು ಕೇಂದ್ರ ಸರ್ಕಾರ ಹೊರತು ರಾಜ್ಯ ಸರ್ಕಾರವಲ್ಲ. ಕಬ್ಬು ಮತ್ತು ಸಕ್ಕರೆ ವಿಚಾರದಲ್ಲಿ ರಾಜ್ಯ ಸರ್ಕಾರದ ಪಾತ್ರ ಕಡಿಮೆ. ಕೇಂದ್ರ ನಿಗದಿ ಮಾಡುವ ದರ ರೈತರಿಗೆ ಲಭಿಸುತ್ತದೆಯೇ ಎಂಬುದನ್ನು ನೋಡಿಕೊಳ್ಳುವುದು, ತೂಕ, ಬೆಲೆ ಮತ್ತು ನಿಗದಿತ ಅವಧಿಯಲ್ಲಿ ಪಾವತಿಯಾಗುವಂತೆ ಗಮನಿಸುವುದು ಮಾತ್ರ ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.
ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ವಿಜಯನಗರ, ಬೀದರ್, ಬಾಗಲಕೋಟೆ, ಗದಗ, ಹುಬ್ಬಳ್ಳಿ-ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಗಂಭೀರ ಸಮಸ್ಯೆ ಬಗ್ಗೆ ನಿಮ್ಮೊಂದಿಗೆ ಚರ್ಚಿಸಲು ತುರ್ತು ಅವಕಾಶ ನೀಡಬೇಕೆಂದು ಮುಖ್ಯಮಂತ್ರಿ ಪ್ರಧಾನಿ ನರೇಂದ್ರ ಮೋದಿಗೆ ಬರೆದಿರುವ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ಸಿದ್ದರಾಮಯ್ಯ ಅವರು ಶುಕ್ರವಾರ ರೈತ ಮುಖಂಡರು ಮತ್ತು ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ಸಭೆ ಕರೆದಿದ್ದಾರೆ.
Advertisement