

ಹರಪ್ಪನಹಳ್ಳಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಸಿಸ್ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಹಾಗೂ ವಿಕೃತ ಕಾಮಿ ಉಮೇಶ್ ರೆಡ್ಡಿ ಸೇರಿ ಹಲವರಿಗೆ ಮೊಬೈಲ್ ಫೋನ್, ಟಿವಿ ಸೇರಿದಂತೆ ರಾಜಾತಿಥ್ಯ ನೀಡಿರುವ ವಿಡಿಯೋಗಳು ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವುದರೊಂದಿಗೆ ಭಾರಿ ಚರ್ಚೆಗೆ ಕಾರಣವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ರಾಜಾತಿಥ್ಯ ನೀಡಿರುವ ಬಗ್ಗೆ ಗೊತ್ತಾಗಿದೆ. ತಪ್ಪು ಮಾಡಿದವರ ಮೇಲೆ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಪಟ್ಟಣದಲ್ಲಿ ನಡೆದ ಮಾಜಿ ಸಚಿವ ಪಿಟಿ ಪರಮೇಶ್ವರ ನಾಯ್ಕ್ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ತಪ್ಪು ಮಾಡಿದವರ ಮೇಲೆ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಸಂಬಂಧ ಪಟ್ಟ ಅಧಿಕಾರಿ ರಜೆಯಲ್ಲಿದ್ದಾರೆ. ಗೃಹ ಸಚಿವರು ನಾಳೆ ಸಭೆ ಕರೆದಿದ್ದಾರೆ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ. ಆ ರೀತಿ ಯಾರು ಮಾಡಿದ್ದಾರೋ ಅವರಿಗೆ, ಅವಕಾಶ ಮಾಡಿಕೊಟ್ಟವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಐಸಿಸ್ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ, ವಿಕೃತ ಕಾಮಿ ಉಮೇಶ್ ರೆಡ್ಡಿ ಹಾಗೂ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಜೈಲು ಸೇರಿರುವ ನಟಿ ರನ್ಯಾ ರಾವ್ ಪ್ರಿಯಕರ ತರುಣ್ ರಾಜ್ ಜೈಲಿನಲ್ಲಿ ಬಿಂದಾಸ್ ಲೈಫ್ ನಡೆಸುತ್ತಿರುವ ಫೋಟೋ ಮತ್ತು ವಿಡಿಯೋಗಳು ಶನಿವಾರ ವೈರಲ್ ಆಗಿತ್ತು. ಫೋನ್‌ನಲ್ಲಿ ಮಾತನಾಡುತ್ತಾ, ಎಲ್ಇಡಿ ಟಿವಿ ನೋಡಿಕೊಂಡು ಮಜಾ ಮಾಡುತ್ತಿದ್ದ ದೃಶ್ಯ ವೈರಲ್ ಆಗಿತ್ತು.
ಇನ್ನೂ ಆರ್ ಎಸ್ ಎಸ್ ಬ್ಯಾನ್ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಆರ್.ಎಸ್.ಎಸ್. ನ್ನು ಸೀಮಿತಗೊಳಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯುವುದನ್ನು ಕಡ್ಡಾಯ ಮಾಡಿಲ್ಲ. ಯಾವುದೇ ಸಂಘ ಸಂಸ್ಥೆಗಳು ಆಯಾ ಜಿಲ್ಲಾಧಿಕಾರಿಗಳ ಬಳಿ ಅನುಮತಿ ಪಡೆಯಬೇಕು ಎಂದು ಆದೇಶದಲ್ಲಿ ಹೇಳಿದೆ. ಅವರು ಹಾಗೆ ಭಾವಿಸಿಕೊಂಡಿದ್ದಾರೆ ಅಷ್ಟೆ. ಆರ್.ಎಸ್.ಎಸ್ ಮುಖ್ಯಸ್ಥರಾದ ಮೋಹನ್ ಭಾಗವತ್ ಅವರು ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಎಂದರು.
Advertisement