

ಬೆಳಗಾವಿ: ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಚಳಿಗಾಲ ಅಧಿವೇಶನದಲ್ಲಿ ಎಲ್ಲಾ ಇಲಾಖೆಗಳಲ್ಲಿ ದೋಷರಹಿತ ವ್ಯವಸ್ಥೆ ಮತ್ತು ಪರಿಣಾಮಕಾರಿ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಬುಧವಾರ ಸುವರ್ಣ ವಿಧಾನಸೌಧದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಬಾರಿಯಂತೆ ಈ ಬಾರಿಯೂ ಅಚ್ಚುಕಟ್ಟಾಗಿ ನಡೆಸಲು ಅನುಕೂಲವಾಗುವಂತೆ ಉಪಸಮಿತಿಗಳನ್ನು ರಚಿಸಲಾಗಿದ್ದು, ಉಪಸಮಿತಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವುದರ ಮೂಲಕ ನಿರ್ವಹಣೆಯಲ್ಲಿ ಯಾವುದೇ ಲೋಪಗಳಾಗದಂತೆ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಚಳಿಗಾಲದ ಅಧಿವೇಶನಕ್ಕೆ ಆಗಮಿಸುವ ಅಧಿಕಾರಿ ಸಿಬ್ಬಂದಿಗಳಿಗೆ ಪಾಸ್ ವಿತರಣೆಯನ್ನು ಭದ್ರತಾ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ವಿತರಿಸಲು ಕ್ರಮವಹಿಸಬೇಕು. ಅಧಿವೇಶನಕ್ಕೆ ಆಗಮಿಸುವ ಅಧಿಕಾರಿ, ಸಿಬ್ಬಂದಿ, ಮಾರ್ಷಲ್‌ಗಳಿಗೆ ಸುವರ್ಣ ವಿಧಾನ ಸೌಧದ ನೆಲಮಹಡಿಯಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಪ್ರತ್ಯೇಕವಾಗಿ ಊಟದ ವ್ಯವಸ್ಥೆ ಮಾಡಬೇಕು ಹಾಗೂ ಸುವರ್ಣ ವಿಧಾನಸೌಧದ ಹೊರಗಡೆ ಪಾವತಿ(ಪೇಡ್) ಕ್ಯಾಂಟೀನ್ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು.
ಅಧಿವೇಶನ ನಡೆಯುವ ಸಂದರ್ಭದಲ್ಲಿ ನಡೆಯುವ ಪ್ರತಿಭಟನೆಗಳಿಗಾಗಿ ಸುವರ್ಣ ವಿಧಾನಸೌಧದ ಬಳಿ ಸೂಕ್ತ ಸ್ಥಳವನ್ನು ಗುರುತಿಸುವ ಕಾರ್ಯವನ್ನು ಅಧಿಕಾರಿಗಳು ಶೀಘ್ರದಲ್ಲೇ ಮಾಡಬೇಕು. ಅಲ್ಲದೇ, ಪ್ರತಿಭಟನೆಗಾಗಿ ಗುರುತಿಸಲಾದ ಸ್ಥಳಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇತರೆ ಸೌಲಭ್ಯಗಳನ್ನು ಸೂಕ್ತ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಿದರು.
ಪ್ರತಿಭಟನೆ ಸ್ಥಳ, ಮುಖ್ಯ ಮಂತ್ರಿಗಳು, ಸಚಿವರು, ಶಾಸಕರುಗಳು ತಂಗುವಂತಹ ಸ್ಥಳಗಳಲ್ಲಿ ಅಂಬ್ಯುಲೆನ್ಸ್ ಸೇರಿದಂತೆ ವೈದ್ಯರ ತಂಡವನ್ನು ನಿಯೋಜನೆ ಮಾಡಬೇಕು. ಅದೇ ರೀತಿ ಸುವರ್ಣ ವಿಧಾನಸೌಧ ಹಾಗೂ ಆವರಣದಲ್ಲಿಯೂ ವೈದ್ಯಕೀಯ ಸಿಬ್ಬಂದಿಗಳ ಜೊತೆಗೆ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು.
ಇದರ ಜೊತೆಗೆ ಆಹಾರ ಸುರಕ್ಷತಾ ಅಧಿಕಾರಿಗಳ ನ್ನು ನಿಯೋಜಿಸಬೇಕು. ಅಧಿವೇಶನಕ್ಕೆ ಆಗಮಿಸುವ ಸಚಿವರು, ಶಾಸಕರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಮಾಡಿಟ್ಟುಕೊಳ್ಳುವುದರ ಜೊತೆಗೆ ವಾಹನಗಳು ಸುಸ್ಥಿತಿಯಲ್ಲಿರುವುದನ್ನು ಖಾತರಿಪಡಿಸಿಕೊಳ್ಳ ಬೇಕು. ಅಧಿವೇಶನದ ಸಂದರ್ಭದಲ್ಲಿ ಜರುಗುವ ಸಾಂಸ್ಕೃತಿ ತಿಕ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆ ಮಾಡಿಟ್ಟುಕೊಳ್ಳಬೇಕು.
ಅಧಿವೇಶನದ ಸಂದರ್ಭದಲ್ಲಿ ದೂರವಾಣಿ ಹಾಗೂ ಇಂಟರ್ನೆಟ್ ವ್ಯವಸ್ಥೆಯಲ್ಲಿ ಯಾವುದೇ ಅಡತಡೆ ಆಗದಂತೆ ಮುಂಜಾಗೃತೆ ಕ್ರಮ ಕೈಗೊಳ್ಳಬೇಕು. ಸುವರ್ಣ ವಿಧಾನಸೌಧದಲ್ಲಿ ಯಾವುದೇ ಕಾರಣಕ್ಕೂ ನೆಟವರ್ಕ್ ಸಮಸ್ಯೆ ಉಂಟಾಗದಂತೆ ಸಿದ್ಧತೆಗಳನ್ನು ಮಾಡಿಕೊಳ್ಳು ವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪೊಲೀಸ್ ಆಯುಕ್ತ ಗುಲಾಬರಾವ್ ಭೂಷಣ ಬೊರಸೆ ಅವರು ಮಾತನಾಡಿ, ಸುವರ್ಣ ವಿಧಾನಸೌಧದಲ್ಲಿ ನಡೆಯುವ ಅಧಿವೇಶನ ವೀಕ್ಷಣೆಗೆ ಆಗಮಿಸುವಂತಹ ಸಾರ್ವಜನಿಕರಿಗೆ ಪಾಸ್ ವಿತರಣೆ ಸಮಯದಲ್ಲಿ ಸುರಕ್ಷತೆ ದೃಷ್ಟಿಯಿಂದ ಅವರ ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳಬೇಕು. ಸುವರ್ಣ ವಿಧಾನಸೌಧಕ್ಕೆ ಆಗಮಿಸುವಂತಹ ವಾಹನಗಳಿಗೆ ನೀಡಲಾಗಿರುವ ಪಾಸ್‌ಗಳನ್ನು ಪರೀಕ್ಷಿಸಿಯೇ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಹೇಳಿದರು.
Advertisement