

ಬೆಳಗಾವಿ: ಕಬ್ಬಿಗೆ ಹೆಚ್ಚಿನ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ನವೆಂಬರ್ 7 ರಂದು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹತ್ತರಗಿ ಟೋಲ್ ಪ್ಲಾಜಾ ಬಳಿ ರೈತರು ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದಾಗ ಈ ಘಟನೆ ನಡೆದಿತ್ತು.
ಪ್ರತಿಭಟನೆಯಿಂದಾಗಿ ಹೆದ್ದಾರಿಯಲ್ಲಿ ಸಂಚಾರಕ್ಕೆ ಸ್ವಲ್ಪ ಸಮಯ ಅಡ್ಡಿಯಾಗಿತ್ತು. ಹೀಗಾಗಿ ಒಂದು ಗುಂಪು ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ 12 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ ಮತ್ತು ಎರಡು ಪೊಲೀಸ್ ವಾಹನ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಚನ್ನಗೌಡ ಸಸಾಲಟ್ಟಿ(40), ಪ್ರಶಾಂತ್ ಮುಗಳಿ(28), ವಿನಾಯಕ್ ಕೋಟಿವಾಲಿ(25), ಮಲ್ಲಪ್ಪ ಘಾಟಗಿ(46), ಶಿವಾನಂದ ವಾಣಿ(59) ಮತ್ತು ಸೋಮನಾಥ ಹಿರೇಮಠ(46) ಎಂದು ಗುರುತಿಸಲಾಗಿದೆ.
"ಹಿಂಸಾಚಾರದಲ್ಲಿ ಭಾಗಿಯಾಗಿರುವ ಈ ವ್ಯಕ್ತಿಗಳು ರೈತರಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಅವರು ಹೇಳಿದ್ದಾರೆ.
ಆರೋಪಿಗಳು ಅಶಾಂತಿ ಸೃಷ್ಟಿಸುವ ಉದ್ದೇಶದಿಂದಲೇ ರೈತರ ಸೋಗಿನಲ್ಲಿ ಪ್ರತಿಭಟನೆಯೊಳಗೆ ನುಸುಳಿದ್ದರು. ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಗುರುತಿಸಲು ವಿಡಿಯೋ ದೃಶ್ಯಾವಳಿಗಳು ಮತ್ತು ಇತರ ಪುರಾವೆಗಳನ್ನು ಬಳಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಮತ್ತು ಕಾನೂನಿನ ಇತರ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Advertisement