

ಬೆಂಗಳೂರು: ರಾಜ್ಯದ ಎಲ್ಲಾ ಬಸ್‌ಗಳಲ್ಲಿ ತುರ್ತು ನಿರ್ಗಮನ ದ್ವಾರಗಳ ಅಳವಡಿಕೆ ಕಡ್ಡಾಯ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಗುರುವಾರ ಹೇಳಿದ್ದಾರೆ.
ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯಲ್ಲಿ ಸಚಿವರು ಈ ನಿರ್ದೇಶನ ನೀಡಿದ್ದಾರೆಂದು ತಿಳಿದುಬಂದಿದೆ.
ಸಭೆಯಲ್ಲಿ ಇತ್ತೀಚಿನ ಬಸ್ ಅಪಘಾತಗಳನ್ನು ಉಲ್ಲೇಖಿಸಿದ ಸಚಿವರು, ಕರ್ನಾಟಕದ ಎಲ್ಲಾ ಬಸ್‌ಗಳು ನೋಂದಣಿ ಅಥವಾ ಫಿಟ್‌ನೆಸ್ ಪ್ರಮಾಣಪತ್ರಗಳನ್ನು ನವೀಕರಿಸುವ ಮೊದಲು ತುರ್ತು ನಿರ್ಗಮನ ದ್ವಾರಗಳನ್ನು ಹೊಂದಿರಬೇಕು. ನಿಯಮ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಶೀಘ್ರದಲ್ಲೇ ಸುತ್ತೋಲೆ ಹೊರಡಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ ನಿಯಮವನ್ನು ಜಾರಿಗೊಳಿಸಲು ವಿಫಲರಾದ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಕೆ ನೀಡಿದರು.
ಕರ್ನಾಟಕಕ್ಕೆ ಪ್ರವೇಶಿಸುವ ಅಂತರರಾಜ್ಯ ಬಸ್‌ಗಳನ್ನು ಪರಿಶೀಲಿಸಲಾಗುತ್ತದೆ ಮತ್ತು ತುರ್ತು ನಿರ್ಗಮನ ದ್ವಾರಗಳಿಲ್ಲದೆ ಕಂಡುಬಂದರೆ ಫಿಟ್‌ನೆಸ್ ಪ್ರಮಾಣಪತ್ರಗಳನ್ನು ರದ್ದುಪಡಿಸಲಾಗುತ್ತದೆ ಎಂದು ಹೇಳಿದರು.
ಹೆಚ್ಚುವರಿ ಲಗೇಜ್ ಸಾಗಿಸುವ ಬಸ್‌ಗಳು ಮತ್ತು ಅನುಮತಿಸಲಾದ ಮಿತಿಗಳನ್ನು ಮೀರಿ ಲೋಡ್ ಸಾಗಿಸುವ ಭಾರೀ ವಾಹನಗಳ ಮೇಲೆ ತಪಾಸಣೆ ತೀವ್ರಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ಶಾಲಾ ಮತ್ತು ಕಾಲೇಜು ಬಸ್‌ಗಳ ಫಿಟ್‌ನೆಸ್ ಪ್ರಮಾಣಪತ್ರಗಳನ್ನು ನವೀಕರಿಸುವ ಮೊದಲು ಸಂಪೂರ್ಣ ತಪಾಸಣೆಗೊಳಪಡಿಸಬೇಕು. ಅವಧಿ ಮೀರಿದ ಪ್ರಮಾಣಪತ್ರಗಳನ್ನು ಹೊಂದಿರುವ ವಾಹನಗಳಿಗೆ ತಕ್ಷಣವೇ ನೋಟಿಸ್ ನೀಡಬೇಕು ಮತ್ತು ಅನುಸರಣೆಯನ್ನು ಮೇಲ್ವಿಚಾರಣೆ ಮಾಡಲು ಪ್ರತಿ ತಿಂಗಳು ವಿಶೇಷ ತಪಾಸಣಾ ತಂಡಗಳನ್ನು ರಚಿಸಲಾಗುತ್ತದೆ ಎಂದು ಹೇಳಿದರು.
Advertisement