

ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ಇಲಾಖಾವಾರು ತನಿಖೆ ರದ್ದುಗೊಳಿಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ(ಸಿಎಟಿ) ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಸಿಎಟಿ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಬಿ ಎಂ ಶ್ಯಾಮ್ ಪ್ರಸಾದ್ ಮತ್ತು ಟಿ ಎಂ ನದಾಫ್ ಅವರ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸಿಎಟಿ ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿದ ಪೀಠವು, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ಮುಂದೂಡಿತು.
ಅಲೋಕ್ ಕುಮಾರ್ ವಿರುದ್ಧ ಟೆಲಿಫೋನ್ ಕದ್ದಾಲಿಕೆ ಆರೋಪವಿತ್ತು. ಈ ಸಂಬಂಧ ತನಿಖೆ ನಡೆಸಿದ್ದ ಸಿಬಿಐ, ಕ್ರಿಮಿನಲ್ ಆರೋಪವಿಲ್ಲ ಎಂದು ತಿಳಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿರುವುದಾಗಿ ವಿಶೇಷ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿತ್ತು.ಅಲ್ಲದೆ, ಪ್ರಕರಣ ಸಂಬಂಧ ಇಲಾಖಾವಾರು ತನಿಖೆ ನಡೆಸಲು ಸರ್ಕಾರಕ್ಕೆ ಸೂಚನೆ ನೀಡಿತ್ತು.
ಇದನ್ನು ಪ್ರಶ್ನಿಸಿ ಅಲೋಕ್ ಕುಮಾರ್ ಸಿಎಟಿ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಸಿಎಟಿ, ಇಲಾಖಾವಾರು ತನಿಖೆ ರದ್ದುಪಡಿಸಿ ಆದೇಶಿಸಿದೆ. ಆ ಆದೇಶವನ್ನು ಪ್ರಶ್ನಿಸಿ ಸರ್ಕಾರವು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ವಾದ ಆಲಿಸಿದ ನ್ಯಾಯಪೀಠ, ಸಿಎಟಿ ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿದೆ.
Advertisement