
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಳ್ಳುತ್ತಿದ್ದು, ಈ ಮಧ್ಯೆ ಸಂಪುಟ ಪುನಾರಚನೆಗೆ ಪಟ್ಟು ಹಿಡಿದಿರುವ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರನ್ನು ಭೇಟಿಯಾಗಲಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿ ನಡುವೆ ಖರ್ಗೆ ಅವರು ಶುಕ್ರವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಮತ್ತೊಂದೆಡೆ ಡಿಕೆ ಶಿವಕುಮಾರ್, ಒಕ್ಕಲಿಗ ಶಾಸಕರ ಬೆಂಬಲದ ಜೊತೆಗೆ ಪಕ್ಷದ ಉಳಿದ ಶಾಸಕರ ಬೆಂಬಲ ಪಡೆಯುವ ಕಸರತ್ತು ಮುಂದುವರೆಸಿದ್ದಾರೆ. ಜೀನುಕಲ್ಲು ಸ್ವಾಮೀಜಿ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದು, ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ.
ಬೆಂಗಳೂರು ಎಟಿಎಂ ವ್ಯಾನ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ನಾಲ್ವರನ್ನು ಬಂಧಿಸಿ, ಅವರಿಂದ ಸುಮಾರು 5.76 ಕೋಟಿ ಹಣ ಸೀಜ್ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಒಟ್ಟು 8 ಜನರ ಗುಂಪಿನಿಂದ ಕೃತ್ಯ ನಡೆದಿದೆ. ಘಟನೆ ನಡೆದ 54 ಗಂಟೆಗಳ ಒಳಗಾಗಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. 5.76 ಕೋಟಿ ಹಣ ಸೀಜ್ ಮಾಡಲಾಗಿದೆ. ಇದೇ ವೇಳೆ 5 ರಾಜ್ಯಗಳಲ್ಲಿ ಶೋಧ ನಡೆಸಲಾಗಿದ್ದು, ತನಿಖೆಗೆ ಒಟ್ಟು 200 ಸಿಬ್ಬಂದಿಗಳನ್ನು ಒಳಗೊಂಡ 11 ತಂಡಗಳನ್ನು ರಚನೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್‌ಸ್ಟೆಬಲ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮೆಕ್ಕೆಜೋಳ ಮತ್ತು ಹೆಸರು ಕಾಳಿನ ಬೆಲೆಯಲ್ಲಿ ತೀವ್ರ ಕುಸಿತ ಉಂಟಾಗಿದ್ದು, ಇದು ರೈತರಲ್ಲಿ ದುಃಖವನ್ನುಂಟು ಮಾಡಿದೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರವು ಮೆಕ್ಕೆ ಜೋಳಕ್ಕೆ ಪ್ರತಿ ಮೆಟ್ರಿಕ್ ಟನ್‌ಗೆ ₹2,400 ಹಾಗೂ ಹೆಸರುಕಾಳಿಗೆ ₹8,768 ಕನಿಷ್ಟ ಬೆಂಬಲ ಬೆಲೆ ಘೋಷಿಸಿದ್ದರೂ, ಕರ್ನಾಟಕದಲ್ಲಿ ಸದ್ಯ ಮಾರುಕಟ್ಟೆ ಬೆಲೆ ಪ್ರತಿ ಟನ್ ಮೆಕ್ಕೆಜೋಳಕ್ಕೆ ₹1600-1800 ಮತ್ತು ಹೆಸರುಕಾಳಿಗೆ ಪ್ರತಿ ಟನ್‌ಗೆ ಸುಮಾರು 5,400 ರೂ. ಆಸುಪಾಸಿನಲ್ಲಿರುವುದು ತೀವ್ರ ಮತ್ತು ಹಿಂದೆಂದೂ ಕಾಣದ ಬೆಲೆ ಕುಸಿತಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಸುಮಾರು 32 ಲಕ್ಷ ಮೆಟ್ರಿಕ್ ಟನ್ ಮೆಕ್ಕೆ ಜೋಳ ಮಾರುಕಟ್ಟೆಯಲ್ಲಿ ಹೆಚ್ಚುವರಿಯಾಗಿ ಲಭ್ಯವಿದ್ದು, ಭಾರತ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ, FCI, NAFED ಹಾಗೂ ಇತರ ಖರೀದಿ ಸಂಸ್ಥೆಗಳು ತಕ್ಷಣ ಬೆಲೆ ಬೆಂಬಲ ಯೋಜನೆ ಅಥವಾ ಸೂಕ್ತ ಮಾರುಕಟ್ಟೆ ಹಸ್ತಕ್ಷೇಪ ಯೋಜನೆಯಡಿ ಮೆಕ್ಕೆ ಜೋಳ ಮತ್ತು ಹೆಸರುಕಾಳನ್ನು ಎಂಎಸ್‌ಪಿ ದರದಲ್ಲಿ ಖರೀದಿಸಲು ಆದೇಶಿಸಬೇಕು ಎಂದು ಮನವಿ ಮಾಡಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮನೆಕೆಲಸದಾಕೆ ನೀಡಿದ ದೂರಿಗೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ವಿರುದ್ಧ ಮ್ಯಾಜಿಸ್ಟ್ರೇಟ್ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣವನ್ನು ಸೆಕ್ಷನ್ 354 ಅಡಿಯಲ್ಲಿ ದಾಖಲಿಸಿ ನಂತರ ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಲಾಗಿತ್ತು. "ದೂರು ದಾಖಲಿಸುವಲ್ಲಿನ ವಿಳಂಬವನ್ನು ಕ್ಷಮಿಸಲು ಮತ್ತು ಅರ್ಜಿದಾರ ಹೆಚ್ ಡಿ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354 ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ದಾಖಲಿಸಿದ ಅಪರಾಧಕ್ಕೆ ಸಂಬಂಧಿಸಿದಂತೆ ಸೂಕ್ತ ಆದೇಶ ನೀಡಲು ಇದು ಸೂಕ್ತವಾದ ಪ್ರಕರಣವೇ ಎಂದು ಪರಿಗಣಿಸಲು ಈ ವಿಷಯವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂತಿರುಗಿಸಲಾಗಿದೆ ಎಂದು ಹೈಕೋರ್ಟ್ ಹೇಳಿದೆ.
2024ರ ಲೋಕಸಭಾ ಚುನಾವಣೆಗೆ ಮುನ್ನ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನಕಲಿ ಮತದಾರರನ್ನು ದೊಡ್ಡ ಪ್ರಮಾಣದಲ್ಲಿ ಸೇರಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಚುನಾವಣಾ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಬೆಂಗಳೂರಿನ ನಲ್ಲೂರುಹಳ್ಳಿ ನಿವಾಸಿ ವೈ ವಿನೋದ ಎಂಬುವವರು ದೂರು ನೀಡಿದ್ದು, ಅಧಿಕಾರಿಗಳು ಮತ್ತು ಖಾಸಗಿ ವ್ಯಕ್ತಿಗಳು ಕ್ಷೇತ್ರದ ಮತದಾರರ ಪಟ್ಟಿಗೆ ನಕಲಿ ಹೆಸರುಗಳನ್ನು ವಂಚನೆಯಿಂದ ಸೇರಿಸಿದ್ದಾರೆ ಎಂದು ಆರೋಪಿಸಿದ್ದಾರೆ. 2024ರ ಲೋಕಸಭಾ ಚುನಾವಣೆ ಸಮಯದಲ್ಲಿ ಬೆಂಗಳೂರು ಕೇಂದ್ರ ಸಂಸದೀಯ ಕ್ಷೇತ್ರದ ಮಹದೇವಪುರ ಮತದಾರರ ಪಟ್ಟಿಗೆ ಗಣನೀಯ ಸಂಖ್ಯೆಯ ನಕಲಿ ಮತದಾರರನ್ನು ಸೇರಿಸಲಾಗಿದೆ. ಇದು ಸಾರ್ವಜನಿಕ ಆದೇಶವನ್ನು ಬುಡಮೇಲು ಮಾಡಿದೆ ಎಂದು ವಿನೋದ ದೂರಿನಲ್ಲಿ ತಿಳಿಸಿದ್ದಾರೆ.
Advertisement