

ಹಾಸನ: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಫೈಟ್ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಉಳಿದ ಅವಧಿಗೆ ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂಬ ಅಭಿಲಾಷೆ ನಮ್ಮದು ಎಂದು ಒಕ್ಕಲಿಗ ಸಮುದಾಯದ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕುಂದೂರು ಮಠದಲ್ಲಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಸ್ವಾಮೀಜಿ, ಡಿಕೆಶಿ ಅವರು ಉಳಿದ ಎರಡೂವರೆ ವರ್ಷಗಳ ಅವಧಿಗೆ ಮುಖ್ಯಮಂತ್ರಿಯಾಗಬೇಕು ಎಂಬ ಅಭಿಲಾಷೆ ನಮಗಿದೆ ಎಂದರು.
ಸದ್ಯ ರಾಜಕೀಯ ಬೆಳವಣಿಗೆಯನ್ನು ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ. ಡಿಕೆ ಶಿವಕುಮಾರ್ ಅವರು ಸಿಎಂ ಆಕಾಂಕ್ಷಿಯಾಗಿದ್ದು, ಪ್ರಸ್ತುತ ಡಿಸಿಎಂ ಆಗಿದ್ದಾರೆ. ನಮಗೆ ಎರಡೂವರೆ ವರ್ಷ ಆದ ಮೇಲೆ ನಮ್ಮ ಸಮುದಾಯದವರು(ಒಕ್ಕಲಿಗ ಸಮುದಾಯ) ಸಿಎಂ ಆಗುತ್ತಾರೆ ಎಂದು ಅಂದುಕೊಂಡಿದ್ದೆವು. ಡಿಕೆ ಶಿವಕುಮಾರ್ ಶಿಸ್ತಿನ ಸಿಪಾಯಿ ಹಾಗೂ ಪಕ್ಷದ ಏಳಿಗೆಗಾಗಿ ದುಡಿದಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಸಾವಿರಾರು ಭಕ್ತರು ಮಠಕ್ಕೆ ಕರೆ ಮಾಡಿ ತಮ್ಮ ಆಸೆ ವ್ಯಕ್ತಪಡಿಸಿದ್ದಾರೆ ಎಂದರು.
ಡಿಕೆಶಿಗೆ ರಾಜಕೀಯ ಒಳಸುಳಿ ಗೊತ್ತಿದೆ . ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಆದ್ರೆ ಅಭಿವೃದ್ಧಿ ಕುಂಠಿತವಾಗುತ್ತದೆ . ಅಭಿವೃದ್ಧಿ ಮಾರಕವಾಗುತ್ತದೆ. ನಮ್ಮ ರಾಜ್ಯದ ಹಿತದೃಷ್ಟಿಯಿಂದ, ಹೈಕಮಾಂಡ್ ಸಮಸ್ಯೆ ಬಗೆಹರಿಸಲಿ ಎಂದು ಆದಿಚುಂಚನಗಿರಿ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.
Advertisement