
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಯಾವುದೇ ಗುರುತು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.
ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿರುವ ಕಟ್ಟಡಕ್ಕೆ ಭೇಟಿ ನೀಡಿದ ಕಾರ್ಮಿಕರೊಬ್ಬರು ಶವವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದರು.
ಕಟ್ಟಡದಲ್ಲಿ ಸುಮಾರು ಒಂದು ವರ್ಷದಿಂದ ಯಾವುದೇ ನಿರ್ಮಾಣ ಕಾರ್ಯ ನಡೆಯುತ್ತಿಲ್ಲ ಎಂದು ಪ್ರಾಥಮಿಕ ತನಿಖೆ ನಡೆಸಿದ ನಂತರ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮದ್ಯದ ಅಮಲಿನಲ್ಲಿ ಬಂದ ವ್ಯಕ್ತಿಯು ಕಟ್ಟಡದಲ್ಲಿ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸುಮಾರು 6-8 ತಿಂಗಳ ಹಿಂದೆ ಮೃತಪಟ್ಟಿರಬಹುದು ಎನ್ನಲಾಗಿದ್ದು, ಪ್ಯಾಂಟ್ ಹಾಗೂ ಶರ್ಟ್ ಧರಿಸಿ ಮಲಗಿದ್ದ ಸ್ಥಿತಿಯಲ್ಲಿದೆ. ಹೀಗಾಗಿ ಮೇಲ್ನೋಟಕ್ಕೆ 35 ರಿಂದ 40 ವರ್ಷದ ಗಂಡಸಿನ ಅಸ್ಥಿಪಂಜರವಿರಬಹುದು ಎಂದು ಅಂದಾಜಿಸಲಾಗಿದೆ.
ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement