
ಮೈಸೂರು: ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಅಭಯಾರಣ್ಯದಲ್ಲಿ ಹುಲಿಗೆ ವಿಷಪ್ರಾಶನ ಮಾಡಿಸಿದ ಆರೋಪದ ಮೇಲೆ ಅರಣ್ಯ ಇಲಾಖೆ ಓರ್ವ ಆರೋಪಿಯನ್ನು ಶನಿವಾರ ಬಂಧನಕ್ಕೊಳಪಡಿಸಿದೆ,
ಪ್ರಕರಣ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಸ್ಮಿತ್ ಬಿಜೂರ್ ನೇತೃತ್ವದ ತಂಡ ಶನಿವಾರ ಹನೂರಿನಲ್ಲಿ ಸ್ಥಳಕ್ಕೆ ಭೇಟಿ ನೀಡಿ, ತನಿಖೆಯನ್ನು ಚುರುಕುಗೊಳಿಸಿದೆ.
12 ವರ್ಷ ವಯಸ್ಸಿನ ಹುಲಿ ದಾರಿ ತಪ್ಪಿ ಹೋಗಿತ್ತು. ಈ ವೇಳೆ ಜಾನುವಾರುಗಳನ್ನು ಬೇಟಿಯಾಡಿತ್ತು. ಹೀಗಾಗಿ ದುಷ್ಕರ್ಮಿಗಳು ಹುಲಿಗೆ ವಿಷಪ್ರಾಶನ ಮಾಡಿಸಿದ್ದರು ಎನ್ನಲಾಗಿದೆ.
ಆರೋಪಿಗಳು ಹುಲಿಯ ಮೃತದೇಹವನ್ನು ಹೂಳಲು ಕಂದಕಕ್ಕೆ ಎಳೆದುಕೊಂಡು ಹೋಗಲು ಯತ್ನಿಸಿದ್ದಾರೆ. ಆದರೆ,250 ಕೆಜಿ ತೂಕದ ದೇಹವನ್ನು ಸ್ಥಳಾಂತರಿಸಲು ಸಾಧ್ಯವಾಗದೆ ಮೃತದೇಹವನ್ನು ತುಂಡುಗಳಾಗಿ ಕತ್ತರಿಸಿ, ವಿವಿಧೆಡೆ ಹೂತಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆ ತನಿಖೆ ಆರಂಭಿಸಿದ್ದು, ಈ ನಡುವೆ ವಾಹನೆ ಹಿಡಿದು ಸ್ನಿಫರ್ ಡಾಗ್ಸ್ ಗಳು ಪಚ್ಚೇದೊಡ್ಡಿ ಗ್ರಾಮದ ಮನೆಯೊಂದಕ್ಕೆ ತೆರಳಿವೆ. ಬಳಿಕ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಮೂರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದಾರೆಂದು ಅರಣ್ಯಾಧಿಕಾರಿಗಳು ಶಂಕಿಸಿದ್ದು, ಇತರರು ತಲೆಮರೆಸಿಕೊಂಡಿದ್ದಾರೆಂದು ತಿಳಿಸಿದ್ದಾರೆ.
ಏತನ್ಮಧ್ಯೆ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಇಂತಹ ಘಟನೆಗಳನ್ನು ತಡೆಗಟ್ಟಲು ಕ್ರಮಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಎಂ ಎಂ ಬೆಟ್ಟಗಳನ್ನು ಹುಲಿ ಮೀಸಲು ಪ್ರದೇಶವೆಂದು ಘೋಷಿಸುವ ಬಗ್ಗೆ ಸ್ಥಳೀಯ ಪ್ರತಿನಿಧಿಗಳೊಂದಿಗೆ ಮಾತುಕತೆ ಆರಂಭಿಸಲು, ಅರಣ್ಯ-ಅಂಚಿನ ಹಳ್ಳಿಗಳಲ್ಲಿನ ಜಾನುವಾರುಗಳ ಮಾಹಿತಿ ಸಂಗ್ರಹಿಸಲು ಮತ್ತು ಕಾಡು ಪ್ರಾಣಿಗಳಿಂದ ಜಾನುವಾರುಗಳು ಸಾವನ್ನಪ್ಪಿದ ರೈತರಿಗೆ ಸಕಾಲಿಕ ಪರಿಹಾರವನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದೇ ವೇಳೆ ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಕಾನೂನು ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗೆ ಸಕಾಲಿಕ ವೇತನ ಮತ್ತು ಮೂಲ ಸೌಲಭ್ಯಗಳನ್ನು ಒದಗಿಸುವಂತೆ ನಿರ್ದೇಶನ ನೀಡಿದ್ದಾರೆ.
Advertisement