
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ನಾಳೆಯಿಂದ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಿದೆ.
ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ಇಂದು ಪೂರ್ಣಗೊಳ್ಳಬೇಕಾಗಿತ್ತು. ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಂಡಿಲ್ಲ. ಹೀಗಾಗಿ ಸಂಪುಟ ಸಹೋದ್ಯೋಗಿಗಳೊಂದಿಗೆ ಮುಖ್ಯಮಂತ್ರಿ ಚರ್ಚಿಸಿದ ನಂತರ ಮತ್ತೆ 10 ದಿನಗಳ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ.
ಸಂಪುಟದ ಸಹೋದ್ಯೋಗಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮೀಕ್ಷೆ ಕಾರ್ಯ ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದರೆ, ಕೆಲವು ಕಡೆಗಳಲ್ಲಿ ಇನ್ನೂ ಪೂರ್ಣಗೊಂಡಿಲ್ಲ. ಕೊಪ್ಪಳ ಜಿಲ್ಲೆಯಲ್ಲಿ ಶೇ. 97, ಉಡುಪಿಯಲ್ಲಿ ಶೇ. 63, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 60 ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ.
ಶಾಲಾ ಶಿಕ್ಷಕರ ಮನವಿ ಮೇರೆಗೆ ಕ್ರಮ: ಅಕ್ಟೋಬರ್ 7 ರಂದು ಸಮೀಕ್ಷೆ ಪೂರ್ಣಗೊಳಿಸಲು ನಿರ್ಧರಿಸಿದ್ದೇವು. ಆದರೆ, ನಿರೀಕ್ಷೆಯಂತೆ ರಾಜ್ಯದ ಹಲವೆಡೆ ಸಮೀಕ್ಷೆ ಕಾರ್ಯ ಪೂರ್ಣಗೊಂಡಿಲ್ಲ. ರಾಜ್ಯದಲ್ಲಿ 1.20 ಲಕ್ಷ ಶಿಕ್ಷಕರು ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಿದ್ದು, ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲು ದಸರಾ ರಜೆ ವಿಸ್ತರಣೆ ಮಾಡುವಂತೆ ರಾಜ್ಯ ಶಿಕ್ಷಕರ ಸಂಘ ಮನವಿ ಮಾಡಿತ್ತು. ಈ ಮನವಿ ಆಧಾರದ ಮೇಲೆ ರಜೆಯನ್ನು ಅಕ್ಟೋಬರ್ 18ರವರೆಗೆ ರಜೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದರು.
ಪರೀಕ್ಷೆಯಲ್ಲಿ ತೊಡಗಿಸಿಕೊಂಡವರು ಸಮೀಕ್ಷೆಗೆ ಬರುವಂತಿಲ್ಲ: ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷೆಯಲ್ಲಿ ತೊಡಗಿಸಿಕೊಂಡವರು ಸಮೀಕ್ಷೆಯಲ್ಲಿ ಭಾಗವಹಿಸುವಂತಿಲ್ಲ. ರಜೆ ವಿಸ್ತರಣೆಯಿಂದ 12 ದಿನಗಳು ಸಿಗಲಿದ್ದು, ಅಕ್ಟೋಬರ್ 18ರೊಳಗೆ ಪೂರ್ಣ ಪ್ರಮಾಣದಲ್ಲಿ ಸಮೀಕ್ಷೆ ಮುಗಿಸಬೇಕು. ಸಮೀಕ್ಷೆಯಲ್ಲಿ ತೊಡಗಿಸಿಕೊಂಡ ಶಿಕ್ಷಕರಿಗೆ 8 ವರ್ಕೀಂಗ್ ರಜೆ, ಇತರ ಸರ್ಕಾರಿ ರಜೆಗಳು ಸಿಗಲಿವೆ. ಸಮೀಕ್ಷೆ ಕಾರ್ಯಕ್ಕೆ ಹಿಂದೇಟು ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮೃತರ ಕುಟುಂಬಕ್ಕೆ ರೂ.20 ಲಕ್ಷ ಪರಿಹಾರ
ಸರ್ವೇ ಕಾರ್ಯದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅವರ ಕುಟುಂಬಕ್ಕೆ ರೂ. 20 ಲಕ್ಷ ಪರಿಹಾರ ಕೊಡುತ್ತೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಬೆಂಗಳೂರಿನಲ್ಲಿ 6,700 ಶಿಕ್ಷಕರು:
ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿದ್ದು, 6,700 ಶಿಕ್ಷಕರನ್ನು ಸಮೀಕ್ಷೆಗೆ ಬಳಸಿಕೊಳ್ಳಲಾಗಿದೆ. ಒಟ್ಟು, 27,000 ಗಣತಿದಾರರನ್ನು ನಿಯೋಜಿಸಲಾಗಿದೆ. ದಿನಕ್ಕೆ 10 -15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ನರಕ ಚತುರ್ದಷಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ ಎಂದು ಸಿಎಂ ತಿಳಿಸಿದರು.
Advertisement