
ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯೊಬ್ಬ ನ್ಯಾಯಾಲಯದ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುರುವಾರ ನಡೆದಿದೆ.
ಇಂದು ಬೆಳಗ್ಗೆ ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ಆರೋಪಿಯನ್ನು ಗೌತಮ್ ಎಂದು ಗುರುತಿಸಲಾಗಿದೆ.
ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯಕೀಯ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಗೌತಮ್ ಕೆ.ಆರ್.ಪುರಂನ ಆಕಾಶನಗರದ ನಿವಾಸಿಯಾಗಿದ್ದು, ತನ್ನ ಸಂಬಂಧಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿಸಲಾಗಿತ್ತು.
ಗೌತಮ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದ ಆಡುಗೋಡಿ ಪೊಲೀಸರು, ಕಳೆದ ಏಪ್ರಿಲ್ನಲ್ಲಿ ಬಂಧಿಸಿ ಜೈಲಿಗೆ ಕಳಿಸಿದ್ದರು.
3ನೇ ತ್ವರಿತಗತಿ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಿಗದಿಯಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ ಗೌತಮ್ ಜೊತೆಗೆ ಮತ್ತೊಂದು ಪ್ರಕರಣದ ಆರೋಪಿಯನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಿಂದ ಬೆಳಗ್ಗೆ ನ್ಯಾಯಾಲಯಕ್ಕೆ ಕರೆತಂದಿದ್ದರು.
ಆರೋಪಿಗಳನ್ನು ಕೈಕೊಳ ಧರಿಸಿಯೇ ಕೋರ್ಟ್ಗೆ ಕರೆತರಲಾಗಿತ್ತು. ಬಳಿಕ ಕೋರ್ಟ್ ಹಾಲ್‌ನಲ್ಲಿ ಕೈಕೊಳವನ್ನು ಪೊಲೀಸರು ಬಿಚ್ಚಿದ್ದರು. ವಿಚಾರಣೆ ಮುಗಿಸಿ ಹೊರಬಂದ ಗೌತಮ್, ಕುಟುಂಬಸ್ಥರನ್ನು ಕಂಡು ತೀರ ಬೇಸರ ಮಾಡಿಕೊಂಡರು ಮತ್ತು ಏಕಾಏಕಿ ಪೊಲೀಸರಿಂದ ತಪ್ಪಿಸಿಕೊಂಡು ಕಟ್ಟಡದ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹಲಸೂರು ಗೇಟ್ ಪೊಲೀಸರು ಸ್ಥಳಕ್ಕೆ ಆಗಮಿಸಿ ತಪಾಸಣೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.
Advertisement