
ಬೆಂಗಳೂರು: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಒಟ್ಟು 10 ಕೆಜಿ ಅಕ್ಕಿ ನೀಡುತ್ತಿದ್ದು, ಇನ್ನುಮುಂದೆ ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಣೆ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು, ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟ, ಕಳ್ಳತನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿರಾ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ ಎಂದರು.
ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆ.ಜಿ ಅಕ್ಕಿಯ ಬದಲಾಗಿ 61.19 ಕೋಟಿ ರೂ. ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ ಎಂದರು.
ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ. ಅನುದಾನದಲ್ಲಿ 6119.52 ಕೋಟಿ ರೂ. ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ (ಪೌಷ್ಠಿಕ ಆಹಾರ ಕಿಟ್) ಒದಗಿಸಲು ಬಜೆಟ್ ಮರುಹಂಚಿಕೆ ಮಾಡಲು ಅನುಮೋದನೆ ನೀಡಲಾಗಿದೆ. ಇಂದಿರಾ ಕಿಟ್ನಲ್ಲಿ 1 ಕೆ.ಜಿ ತೊಗರಿ ಬೇಳೆ, 1 ಲೀಟರ್ ಅಡುಗೆ ಎಣ್ಣೆ, 1 ಕೆ.ಜಿ ಸಕ್ಕರೆ ಹಾಗೂ 1 ಕೆ.ಜಿ ಉಪ್ಪು ಇರಲಿದೆ ಎಂದು ಸಚಿವರು ತಿಳಿಸಿದರು.
ಇನ್ನು ಈ ಬಗ್ಗೆ ಮಾತನಾಡಿದ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು, ಕುಟುಂಬದಲ್ಲಿ ಒಬ್ಬರು, ಇಬ್ಬರು ಮಾತ್ರ ಇದ್ದರೆ ಅರ್ಧರ್ಧ ಕೆ.ಜಿ ಇರುವ ಕಿಟ್ ನೀಡಲಾಗುತ್ತದೆ. ಕುಟುಂಬದಲ್ಲಿ ಮೂರು ನಾಲ್ಕು ಮಂದಿ ಸದಸ್ಯರು ಇದ್ದರೆ ಒಂದೊಂದು ಕೆ.ಜಿಯ ಕಿಟ್ ನೀಡಲಾಗುತ್ತದೆ. ಐದಕ್ಕಿಂತ ಹೆಚ್ಚು ಮಂದಿ ಸದಸ್ಯರು ಇದ್ದರೆ ಒಂದೂವರೆ ಕೆ.ಜಿ ಇರುವ ಕಿಟ್ ವಿತರಣೆ ಮಾಡಲಾಗುತ್ತದೆ. ಇದರಿಂದ 4,48,62,192 ಫಲಾನುಭವಿಗಳಿಗೆ ಅನುಕೂಲ ಆಗಲಿದೆ ಎಂದು ವಿವರಿಸಿದರು.
ಮೂಲಸೌಕರ್ಯ ಅಭಿವೃದ್ಧಿಯಲ್ಲಿ, ಮೊದಲ ಹಂತದಲ್ಲಿ 1,000 ಕೋಟಿ ರೂ. ಅಂದಾಜು ವೆಚ್ಚದಲ್ಲಿ 39 ಪ್ರಮುಖ ಸೇತುವೆಗಳ ಪುನರ್ನಿರ್ಮಾಣ ಮತ್ತು ಪುನರ್ವಸತಿಗೆ ಸಂಪುಟ ಅನುಮೋದನೆ ನೀಡಿದೆ.
ಬಹುಮಹಡಿ ಕಟ್ಟಡಗಳಲ್ಲಿ ವಿಪತ್ತು ಪ್ರತಿಕ್ರಿಯೆ ಸಾಮರ್ಥ್ಯಗಳನ್ನು ಬಲಪಡಿಸಲು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ 52-54 ಮೀಟರ್ ತಲುಪುವ ಸಾಮರ್ಥ್ಯವಿರುವ ವೈಮಾನಿಕ ಲ್ಯಾಡರ್ ಪ್ಲಾಟ್‌ಫಾರ್ಮ್ ವಾಹನ ಖರೀದಿಸಲು 16 ಕೋಟಿ ರೂ. ಅಂದಾಜು ವೆಚ್ಚಕ್ಕೆ ಅನುಮೋದನೆ ನೀಡಲಾಯಿತು.
ಕನಕಪುರದಲ್ಲಿ ವೈದ್ಯಕೀಯ ಕಾಲೇಜ್
ಕನಕಪುರದಲ್ಲಿ ಸ್ವಾಯತ್ತ ಸ್ಥಾನಮಾನ ಮತ್ತು ವಾರ್ಷಿಕ 150 ವಿದ್ಯಾರ್ಥಿಗಳ ಪ್ರವೇಶದೊಂದಿಗೆ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಪುಟ ಅನುಮೋದನೆ ನೀಡಿದೆ.
550 ಕೋಟಿ ರೂ. ವೆಚ್ಚದ ಈ ಯೋಜನೆಯಲ್ಲಿ ಕಾಲೇಜು ಕಟ್ಟಡಗಳು, 300 ಹಾಸಿಗೆಗಳ ವೈದ್ಯಕೀಯ ಕಾಲೇಜ್ ಆಸ್ಪತ್ರೆ, ಹಾಸ್ಟೆಲ್‌ಗಳು, ಸಿಬ್ಬಂದಿ ವಸತಿಗೃಹಗಳು ಮತ್ತು ಸಂಬಂಧಿತ ಸೌಲಭ್ಯಗಳು ಸೇರಿವೆ.
Advertisement