
ಬೆಂಗಳೂರು: ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆ ಮಾಡುವ ಕುರಿತು ರಾಜ್ಯದಲ್ಲಿ ಪರ ಹಾಗೂ ವಿರುದ್ಧವಾದ ಚರ್ಚೆಗಳು ಜೋರಾಗಿ ನಡೆಯುತ್ತಿದ್ದು, ಈ ನಡುವೆ ಗುರುವಾರ ನಡೆಯುವ ಸಂಪುಟ ಸಭೆಯಲ್ಲಿಯೂ ಈ ಬಗ್ಗೆ ಮಹತ್ವದ ಮಾತುಕತೆ ನಡೆಯುವ ಸಾಧ್ಯತೆಗಳಿವೆ ಎಂದ ಮೂಲಗಳು ತಿಳಿಸಿವೆ.
ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ (ಕೆಎಸ್‌ಟಿಆರ್‌ಐ) ಕುರುಬ ಸಮುದಾಯದ ಅಧ್ಯಯನವನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆಯುವ ಸಂಪುಟ ಸಭೆಯಲ್ಲಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವ ಚರ್ಚೆ ನಡೆಸಲುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಆದೇಶದ ಮೇರೆಗೆ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು. ಆದರೆ, ಕೇಂದ್ರ ಸರ್ಕಾರ ಸ್ಪಷ್ಟನೆ ಕೋರಿ ವಾಪಸ್ ಕಳುಹಿಸಿತ್ತು. ನಂತರ ಸಮುದಾಯ ಕುರಿತು ಅಧ್ಯಯನ ಅಗತ್ಯವಾಯಿತು.
ಮಂಗಳವಾರ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಂದಿನ ಬಿಜೆಪಿ ಸರ್ಕಾರ ಈ ಕುರಿತು ನಿರ್ಧಾರ ತೆಗೆದುಕೊಂಡಿದೆ. ಕುರುಬರನ್ನು ಎಸ್.ಟಿ ಗೆ ಸೇರಿಸಿದರೆ ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ. ಜೆ.ಹೆಚ್.ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ಎಸ್.ಟಿ ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು. ಇವತ್ತಿನವರೆಗೂ ಇದು ಸಾಧ್ಯವಾಗಿಲ್ಲ ಎಂದು ಹೇಳಿದ್ದರು.
ಮುಖ್ಯಮಂತ್ರಿಗಳ ಈ ಪ್ರತಿಕ್ರಿಯೆಗೆ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಯಾರೇ ತಪ್ಪು ಮಾಡಿದರೂ ಅವರ ಮುಖಕ್ಕೆ ಹೇಳುತ್ತೇನೆ. ತಟ್ಟೆ, ಊಟ ತಾರದೆ ಬಂದರೆ ಜನರ ಧ್ವನಿಯಾಗಿ ಹೋರಾಡಲು ಸಿದ್ಧನಿದ್ದೇನೆಂದು ಹೇಳಿದ್ದಾರೆ.
ಕುರುಬರನ್ನು ಎಸ್ಟಿ ವರ್ಗಕ್ಕೆ ಸೇರ್ಪಡೆ ಮಾಡುವುದಕ್ಕೂ ಮುನ್ನ ಕುಲಶಾಸ್ತ್ರ ಅಧ್ಯಯನ ಮಾಡಬೇಕು. ಕುರುಬರು ಬುಡಕಟ್ಟು ಸಮುದಾಯಕ್ಕೆ ಸೇರಿದವರೇ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು. ಕುರುಬರು ಒಬಿಸಿಯಿಂದ ಎಸ್ಟಿಗೆ ಸೇರ್ಪಡೆಯಾಗುತ್ತಾರೆ ಎಂದಾದರೆ ಆ ಕ್ಷಣದಿಂದಲೇ ಶಿಕ್ಷಣ, ಉದ್ಯೋಗ ಸೇರಿದಂತೆ ಮತ್ತಿತರ ಕ್ಷೇತ್ರಗಳಲ್ಲಿನ ಎಸ್ಟಿ ಮೀಸಲಾತಿಯನ್ನು ಶೇ. 14ಕ್ಕೆ ಹೆಚ್ಚಿಸಬೇಕು. ಈ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ರಾಜ್ಯ ಸರ್ಕಾರದಿಂದ ಒತ್ತಡ ಹೇರಬೇಕು ಎಂದು ತಿಳಿಸಿದ್ದಾರೆ.
1990-91ರಲ್ಲಿ ಚಂದ್ರಶೇಖರ್ ಪ್ರಧಾನಿಯಾಗಿದ್ದಾಗ ಉಗ್ರಪ್ಪ ಮತ್ತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ನಾಯಕ ಸಮುದಾಯಕ್ಕೆ ಎಸ್.ಟಿ. ಸ್ಥಾನಮಾನ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು.
ಇದೀಗ ಸಿದ್ದರಾಮಯ್ಯ ಅವರು ಎಸ್.ಟಿ. ನಾಯಕ ಸಮುದಾಯವನ್ನು ಎದುರಿಸುವ ಮೂಲಕ ತಮ್ಮ ಕುರುಬ ಸಮುದಾಯಕ್ಕೆ ಎಸ್.ಟಿ. ಸ್ಥಾನಮಾನ ದೊರಕಿಸುವ ಪ್ರಯತ್ನ ನಡೆಸುತ್ತಿದ್ದಾರೆ.
ಎಸ್'ಟಿ ನಾಯಕರಾದ ಬಿ. ನಾಗೇಂದ್ರ ಮತ್ತು ಕೆ.ಎನ್. ರಾಜಣ್ಣ ಅವರು ಸಚಿವ ಸ್ಥಾನದಿಂದ ಹೊರಗಿದ್ದು, ಎಸ್.ಟಿ. ನಾಯಕ ಸಮುದಾಯದ ಪ್ರಾತಿನಿಧ್ಯವಿಲ್ಲದ ಸಮಯದಲ್ಲಿ ಈ ವಿಚಾರ ಕುರಿತು ಸಚಿವ ಸಂಪುಟದಲ್ಲಿ ಚರ್ಚೆ ನಡೆಯುತ್ತಿದೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ. ರಾಜಣ್ಣ ಅವರ ಪತ್ನಿ ಹಾಗೂ ತುಮಕೂರು ಜಿಲ್ಲಾ ಪಂಚಾಯತ್‌ನ ಮಾಜಿ ಅಧ್ಯಕ್ಷೆ ಶಾಂತಲಾ ಅವರು ಈಗಾಗಲೇ ಕುರುಬರಿಗೆ ಎಸ್'ಟಿ ಸ್ಥಾನಮಾನ ನೀಡುವುದಕ್ಕೆ ವಿರೋಧ ವ್ಯಕ್ತಪಡಿಲಿದ್ದಾರೆ.
ಇನ್ನು ಎಸ್‌ಟಿ ಅಭಿವೃದ್ಧಿ ಖಾತೆಯನ್ನೂ ಹೊಂದಿರುವ ಸಿದ್ದರಾಮಯ್ಯ ಅವರು, ಕೇಂದ್ರಕ್ಕೆ ಹೊಸ ಪ್ರಸ್ತಾವನೆಯನ್ನು ಕಳುಹಿಸುವ ತುರ್ತಿನಲ್ಲಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಚುರುಕುಗೊಳ್ಳುವಂತೆ ಮಾಡಿದ್ದಾರೆ.
ಜುಲೈ 2023 ರಲ್ಲಿ ಸರ್ಕಾರ ಸಲ್ಲಿಸಿದ ಪ್ರಸ್ತಾವನೆ ಸೇರಿದಂತೆ ಹಿಂದಿನ ಪ್ರಸ್ತಾವನೆಗಳನ್ನು ಪರಿಶೀಲಿಸಿದ ಭಾರತದ ರಿಜಿಸ್ಟ್ರಾರ್ ಜನರಲ್ ಕಚೇರಿ, ರಾಜ್ಯದ ಎಸ್‌ಟಿ ಕಲ್ಯಾಣ ಇಲಾಖೆಯು ಆದಷ್ಟು ಬೇಗ ಪ್ರತಿಕ್ರಿಯಿಸುವಂತೆ ಸರ್ಕಾರಕ್ಕೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
Advertisement