
ಬೆಂಗಳೂರು: ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, ಆರ್‌ಎಸ್‌ಎಸ್ ಪಸರಿಸುತ್ತಿರುವ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ, ಮುಗ್ದರನ್ನು ಬ್ರೈನ್ ವಾಶ್ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆಯವರು ಬುಧವಾರ ಹೇಳಿದ್ದಾರೆ.
ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಕ್ಕೆ ಪತ್ರ ಬರೆದ ಬಳಿಕ ತಮಗೆ ಬೆರದಿಕೆ ಕರೆಗಳು ಬರುತ್ತಿರುವುದಾಗಿ ಈ ಹಿಂದೆ ಪ್ರಿಯಾಂಕ್ ಖರ್ಗೆಯವರು ಹೇಳಿದ್ದರು. ಇದೀಗ ಇದಕ್ಕೆ ದಾಖಲೆಯನ್ನೂ ಬಿಡುಗಡೆ ಮಾಡಿದ್ದಾರೆ.
RSS ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ.. ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ. ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ? ಎಂದು ಪ್ರಶ್ನಿಸಿದ್ದಾರೆ.
ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ವಿಜಯೇಂದ್ರ, ಅಶೋಕ್, ಸಿಟಿ ರವಿ, ಸುನೀಲ್ ಕುಮಾರ್, ಪ್ರತಾಪ್ ಸಿಂಹ, ಛಲವಾದಿ ನಾರಾಯಣಸ್ವಾಮಿಯವರು ಸೇರಿದಂತೆ ಇತರೆ ಬಿಜೆಪಿ ನಾಯಕರು ಒಪ್ಪುತ್ತಾರೆಯೇ?
ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ.
ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, RSS ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ, ಮುಗ್ದರನ್ನು ಬ್ರೈನ್ ವಾಶ್ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ. ಆರ್‌ಎಸ್‌ಎಸ್ ನ ಕಾಲಾಳುಗಳಾಗಿರುವ ಜನರನ್ನು ವಿಕಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ, ಬುದ್ಧ, ಬಸವ, ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ. ಮುಗ್ದ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ ಮತ್ತು ದೃಢವಾದ ಹೆಜ್ಜೆಗಳನ್ನು ಇಡುತ್ತೇನೆಂದು ತಿಳಿಸಿದ್ದಾರೆ.
ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆಯಷ್ಟೇ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ದಾಂತಿಕ ರಾಜಕಾರಣ, ಮುಗ್ದ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ ಎಂದ ತಿರುಗೇಟು ನೀಡಿದ್ದಾರೆ.
Advertisement