
ಮಂಡ್ಯ: ಪ್ರತಿಷ್ಠಿತ ಎಚ್ಎಂಟಿ ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸಲು ವಿವರವಾದ ಯೋಜನಾ ವರದಿ (DPR) ಸಿದ್ಧಪಡಿಸಲಾಗುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಗುರುವಾರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ HMT ಮತ್ತು ಭದ್ರಾವತಿಯಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಸ್ಥಾವರ(VISL) ಎರಡನ್ನೂ ಪುನರುಜ್ಜೀವನಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದರು.
"ಈ ನಿಟ್ಟಿನಲ್ಲಿ ಈಗಾಗಲೇ ಹಲವಾರು ಸುತ್ತಿನ ಚರ್ಚೆಗಳು ನಡೆದಿವೆ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.
"ನೀತಿ ಆಯೋಗದ ಸದಸ್ಯರಾದ ಡಾ. ವಿ ಕೆ ಸಾರಸ್ವತ್ ಅವರು HMT ಪುನರುಜ್ಜೀವನದ ಕುರಿತು ಪ್ರಮುಖ ವರದಿಯನ್ನು ಸಲ್ಲಿಸಿದ್ದಾರೆ. ನವದೆಹಲಿಯಲ್ಲಿ ಬೃಹತ್ ಕೈಗಾರಿಕೆ ಸಚಿವಾಲಯದ ಹಿರಿಯ ಅಧಿಕಾರಿಗಳು, HMT ವ್ಯವಸ್ಥಾಪಕ ನಿರ್ದೇಶಕರು ಮತ್ತು ಡಾ. ಸಾರಸ್ವತ್ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಲಾಗಿದೆ" ಎಂದು ಅವರು ಹೇಳಿದರು.
ತಾಂತ್ರಿಕ ಸಹಯೋಗದ ಸಾಧ್ಯತೆಗಳನ್ನು ಅನ್ವೇಷಿಸಲು ಎಂಎಚ್ಐನ ಹೆಚ್ಚುವರಿ ಕಾರ್ಯದರ್ಶಿ ಮತ್ತು HMT ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದ ತಂಡವನ್ನು ಜಪಾನ್‌ಗೆ ಕಳುಹಿಸಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡಬೇಕು ಎಂಬುದು ಜನರ ಅಭಿಲಾಷೆಯಾಗಿದೆ. ರಾಜ್ಯ ಸರ್ಕಾರದ ಸಹಕಾರ ಕೇಳಿದ್ದೇನೆ ಹಾಗೂ ದೆಹಲಿ ಮಟ್ಟದಲ್ಲಿಯೂ ಮಂಡ್ಯದಲ್ಲಿ ಉದ್ಯಮ ಸ್ಥಾಪಿಸುವ ಬಗ್ಗೆ ಹಲವಾರು ಉದ್ದಿಮೆದಾರರ ಜತೆ ಮಾತುಕತೆ ನಡೆಸಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
Advertisement