
ಬೆಂಗಳೂರು: 2013ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ಸಿದ್ದರಾಮಯ್ಯ ಸರ್ಕಾರ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ RSS ಹೆಸರು ಉಲ್ಲೇಖಿಸದೆ ಅದರ ಕಾರ್ಯ ಚಟುವಿಟಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ. ಈ ನಿಯಮ ಜಾರಿಯಾದರೆ RSS ಮಾತ್ರವಲ್ಲ. ಖಾಸಗಿ ಸಂಘ ಸಂಸ್ಥೆಗಳು/ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸುವುದಕ್ಕೆ ಕಡಿವಾಣ ಬೀಳಲಿದೆ. ಯಾರೇ ಯಾವುದೇ ಕಾರ್ಯಕ್ರಮ ಮಾಡುವುದಾದರೂ ಅನುಮತಿ ಪಡೆಯಬೇಕಾಗುತ್ತದೆ.
ಶೈಕ್ಷಣಿಕೇತರ ಚಟುವಟಿಕೆಗಳಿಗೆ ಶಾಲಾ ಮೈದಾನಗಳನ್ನು ಬಳಸುವುದನ್ನು ನಿಷೇಧಿಸುವ ಸುತ್ತೋಲೆಯ ಕುರಿತು ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪೋಷಕರು ಮತ್ತು ಮಕ್ಕಳು ತಮ್ಮ ಸೈದ್ಧಾಂತಿಕ ಮನಸ್ಥಿತಿಯ ಬಗ್ಗೆ ದೂರು ನೀಡಿದ್ದಾರೆ. ಆದ್ದರಿಂದ ನಾವು ಮಕ್ಕಳ ಹಿತದೃಷ್ಟಿಯಿಂದ ಆದೇಶವನ್ನು ಮಾಡಬೇಕಾಯಿತು. ಮಕ್ಕಳಿಗೆ ಒಳ್ಳೆಯದಲ್ಲದ ಯಾವುದನ್ನೂ ನಮ್ಮ ಶಾಲೆಗಳಲ್ಲಿ ಅನುಮತಿಸಲಾಗುವುದಿಲ್ಲ ಎಂದು ಹೇಳಿದರು.
ಇದಕ್ಕೂ ಮೊದಲು ಸಚಿವ ಪ್ರಿಯಾಂಕ್ ಖರ್ಗೆ ಸಿದ್ದರಾಮಯ್ಯಗೆ ಮತ್ತೊಂದು ಪತ್ರ ಬರೆದಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕಾರ್ಯಕ್ರಮಗಳಲ್ಲಿ ಸರ್ಕಾರಿ ಅಧಿಕಾರಿಗಳು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತನಾಡುತ್ತಾರೆ ಎಂದು ಆರೋಪಿಸಿದರು. ಅಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅವರು ಪತ್ರ ಬರೆದಿದ್ದರು.
ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡವಳಿಕೆ) ನಿಯಮಗಳು, 2021 ಅನ್ನು ಜಾರಿಗೆ ತರಬೇಕೆಂದು ಖರ್ಗೆ ಒತ್ತಾಯಿಸಿದರು. ಇದು ನಾಗರಿಕ ಸೇವಕರು ತಮ್ಮ ನಡವಳಿಕೆಯಲ್ಲಿ ರಾಜಕೀಯವಾಗಿ ತಟಸ್ಥವಾಗಿರಬೇಕೆಂದು ಹೇಳುತ್ತದೆ. ಇದು ನನ್ನ ನಿಯಮವಲ್ಲ. ಇದು ಕರ್ನಾಟಕ ನಾಗರಿಕ ಸೇವೆಯ ನಿಯಮ, ಅಲ್ಲಿ ಜನರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅಥವಾ ರಾಜಕೀಯ ಒಲವು ಹೊಂದಿರುವ ಸಂಘಗಳೊಂದಿಗೆ ಸಂಬಂಧ ಹೊಂದಲು ಸಾಧ್ಯವಿಲ್ಲ ಎಂದು ಖರ್ಗೆ ಸ್ಪಷ್ಟಪಡಿಸಿದ್ದರು.
ಹಲವಾರು ಪಿಡಿಒಗಳು, ಗ್ರಾಮ ಲೆಕ್ಕಿಗರು ಮತ್ತು ಇತರ ರಾಜ್ಯ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕ್ರಮಗಳಲ್ಲಿ ಸರ್ಕಾರದ ವಿರುದ್ಧ ಮಾತನಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಹೀಗಾಗಿ ಈ ಕಾಯ್ದೆಯನ್ನು ಜಾರಿಗೆ ತರಬೇಕಾಗಿದೆ. ಆರ್‌ಎಸ್‌ಎಸ್‌ನ ಶತಮಾನೋತ್ಸವ ಆಚರಣೆಯಲ್ಲಿ ಭಾಗವಹಿಸಿದ ಸರ್ಕಾರಿ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು ಅವರನ್ನು ಅಮಾನತುಗೊಳಿಸಲಾಗುವುದು ಎಂದು ಅವರು ಹೇಳಿದರು. ನನ್ನ ಸ್ವಂತ ಇಲಾಖೆಯಲ್ಲಿ, ಆರ್‌ಎಸ್‌ಎಸ್‌ನ ಶತಮಾನೋತ್ಸವ ಆಚರಣೆಯಲ್ಲಿ ಭಾಗವಹಿಸಿದ ಬಹಳಷ್ಟು ಜನರಿದ್ದಾರೆ. ನಾನು ಈಗಾಗಲೇ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದೇನೆ. ಅವರನ್ನು ಒಂದು ಅಥವಾ ಎರಡು ದಿನಗಳಲ್ಲಿ ಅಮಾನತುಗೊಳಿಸಲಾಗುವುದು ಎಂದು ಹೇಳಿದರು.
Advertisement