
ಬೆಂಗಳೂರು: ಸರ್ಕಾರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಸಿಎಂಗೆ ಬರೆದ ಪತ್ರದ ಹಿನ್ನೆಲೆಯಲ್ಲಿ, ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಅಥವಾ ಸಂಘ ಸಂಸ್ಥೆಗಳು ಹೇಗೆ ಸೇರಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಇರುವ ಎಲ್ಲ ನಿಯಮಗಳು ಮತ್ತು ಕಾಯ್ದೆಗಳನ್ನು ಕ್ರೋಢೀಕರಿಸಿ ಹೊಸ ನಿಯಮವನ್ನು ಜಾರಿಗೆ ತರಲು ನಿನ್ನೆ ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ' ಎಂದರು.
'ಇದು ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಎಸ್‌ಒಪಿ... ಈ ಚಿಂತನೆಯು ಅಂತಿಮವಾಗಿ ಮಹಾತ್ಮ ಗಾಂಧಿಯವರ ಹತ್ಯೆಗೆ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಸೋಲಿಗೆ ಕಾರಣವಾಯಿತು. ಇದು ಸಮಾಜಕ್ಕೆ ಅತ್ಯಂತ ವಿಷಕಾರಿ ಚಿಂತನೆಯಾಗಿದೆ. ಅಂತಹ ಮಹಾನ್ ವ್ಯಕ್ತಿಗಳನ್ನೇ ಅವರು ಬಿಡದಿದ್ದಾಗ, ನಾನು ಯಾರು?' ಎಂದು ಹೇಳಿದರು.
ನಾನು ಪ್ರಸ್ತಾಪಿಸಿದ ಸಮಸ್ಯೆಗಳನ್ನು ಪರಿಹರಿಸುವ ಬದಲು ಬಿಜೆಪಿಯವರು ವೈಯಕ್ತಿಕ ದಾಳಿಗೆ ಮುಂದಾಗಿದ್ದಾರೆ. ನನ್ನ ವಿರುದ್ಧ ವೈಯಕ್ತಿಕ ದೂಷಣೆ ಮಾಡುವ ಬದಲು ಬಿಜೆಪಿಯವರು ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರಿಬೇಕು... ಆರ್‌ಎಸ್‌ಎಸ್ ಪರವಾಗಿ ಅವರು ಏಕೆ ಮಾತನಾಡುತ್ತಿದ್ದಾರೆ? ಆರ್‌ಎಸ್‌ಎಸ್ ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲವೇ? ಎಂದು ಪ್ರಶ್ನಿಸಿದರು.
ಈಮಧ್ಯೆ, ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಆರೆಸ್ಸೆಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ಪತ್ರ ಬರೆದ ನಂತರ ಕಳೆದ ಕೆಲವು ದಿನಗಳಿಂದ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬಂದ ಹಿನ್ನೆಲೆಯಲ್ಲಿ ಅವರ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬಂದಿರುವ ಬೆದರಿಕೆ ಕರೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅವುಗಳ ಮೂಲ ಮತ್ತು ಉದ್ದೇಶವನ್ನು ಪತ್ತೆಹಚ್ಚಲು ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆದರಿಕೆ ಕರೆ ಮಾಡಿದವರು ಯಾರು ಮತ್ತು ಎಲ್ಲಿಂದ ಬಂತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸರ್ಕಾರಿ ಜಾಗಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಚಟುವಟಿಕೆಗಳನ್ನು ನಿರ್ಬಂಧಿಸುವ ಬೇಡಿಕೆಯನ್ನು ಸಚಿವರು ವ್ಯಕ್ತಪಡಿಸಿರಬಹುದು ಮತ್ತು ಈ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಅದಕ್ಕಾಗಿ ಬೆದರಿಕೆ ಹಾಕುವುದು ಸರಿಯಲ್ಲ, ಎಲ್ಲದರ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದರು.
Advertisement