
ಮಳವಳ್ಳಿ: ಮಂಡ್ಯ ಜಿಲ್ಲೆಯ ಮಳವಳ್ಳಿ ಬಳಿ ಭಾನುವಾರ ಮೂರು ಸರ್ಕಾರಿ ಬಸ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಮಳವಳ್ಳಿ - ಕೊಳ್ಳೇಗಾಲ ರಸ್ತೆಯಲ್ಲಿರುವ ಬಾಚನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ.
ಮೊದಲು ಎರಡು ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತಕ್ಕೀಡಾಗಿ ನಿಂತಿದ್ದ ಬಸ್ಗೆ ಮತ್ತೊಂದು ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಮಳವಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಡಿಕ್ಕಿಯ ತೀವ್ರತೆಗೆ ಬಸ್ಸುಗಳ ಮುಂಭಾಗ ನಜ್ಜುಗುಜ್ಜಾಗಿದೆ. ಗಾಯಾಳುಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ, ಎಲ್ಲಾ ಗಾಯಾಳುಗಳನ್ನು ಮಳವಳ್ಳಿ, ಮಂಡ್ಯ ಮತ್ತು ಮೈಸೂರು ಆಸ್ಪತ್ರೆಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮಳವಳ್ಳಿ ತಾಲ್ಲೂಕು ವೈದ್ಯಾಧಿಕಾರಿಗಳು ಮತ್ತು ಪೊಲೀಸರು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದು, ಯಾರಿಗೂ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿರುವುದಾಗಿ ಅವರು ಹೇಳಿದ್ದಾರೆ.
Advertisement