
ಬೆಂಗಳೂರು: ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು ಮುಂದಿನ 10 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಮಳೆ ಮತ್ತಷ್ಟು ದಿನ ಮುಂದುವರಿಯುವ ಸಾಧ್ಯತೆ ಇದ್ದು, ಮುಂದಿನ 10 ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದು, ಚಾಮರಾಜನಗರದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಾಳೆ ಭಾರಿ ಮಳೆ ಸಾಧ್ಯತೆ
ಪ್ರಮುಖವಾಗಿ ನಾಳೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದ 24 ಜಿಲ್ಲೆಗಳಲ್ಲಿಯೂ ಸಾಧಾರಾಣ ಮಳೆಯಾಗಲಿರುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.
ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಗೆ ಅಲರ್ಟ್
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ ಜೊತೆ ಹೆಚ್ಚಿನ ಪ್ರಮಾಣದ ಗಾಳಿಯೂ ಬೀಸುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.
ಬೆಂಗಳೂರಲ್ಲಿ ಗಾಳಿ ಮಳೆ ಸಾಧ್ಯತೆ
ರಾಜಧಾನಿ ಬೆಂಗಳೂರಲ್ಲಿ ನಾಳೆ ಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಶೇಕಡಾ 86ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 11-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾವಾನ ಇಲಾಖೆ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಎನ್ನಲಾಗಿದೆ.
Advertisement