
ಬೆಂಗಳೂರು: ತನ್ನ ವೈಫಲ್ಯಗಳ ಮುಚ್ಚಿಡಲು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸೋಮವಾರ ಹೇಳಿದ್ದಾರೆ.
ಹಾಸನದ ಹಾಸನಾಂಬ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರವು ಇತ್ತೀಚಿನ ಮಳೆ ಮತ್ತು ಪ್ರವಾಹದಲ್ಲಿ ರೈತರು ಎದುರಿಸುತ್ತಿರುವ ಬೆಳೆ ನಷ್ಟದಂತಹ ಪ್ರಮುಖ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದು, ಇದರಂತೆ ಆರ್‌ಎಸ್‌ಎಸ್ ಸೇರಿದಂತೆ ಇತರೆ ಸಂಘಟನೆಗಳು ಸರ್ಕಾರಿ ಆವರಣದಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ಪಡೆಯವಂತಹ ಹೊಸ ವಿಷಯಗಳನ್ನು ಎತ್ತುತ್ತಿದೆ ಎಂದು ಆರೋಪಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ರೈತರಿಗೆ ಬೆಳೆ ನಷ್ಟ ಪರಿಹಾರವನ್ನು ಬಿಡುಗಡೆ ಮಾಡಿಲ್ಲ. ರಾಜ್ಯವನ್ನು ಕಾಡುತ್ತಿರುವ ಹಲವಾರು ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಇನ್ನೂ ಸರ್ವಪಕ್ಷ ಸಭೆಯನ್ನು ನಡೆಸಿಲ್ಲ ಎಂದು ಹೇಳಿದರು.
ಇದೇ ವೇಳೆ ತಮ್ಮ ಸರ್ಕಾರ ಮತ್ತು ಹಿಂದಿನ ಬಿಜೆಪಿ ಆಡಳಿತ ಬಿಡುಗಡೆ ಮಾಡಿದ ಅನುದಾನ ಕುರಿತು ಚರ್ಚೆಗೆ ಬರುವಂತೆ ಮುಖ್ಯಮಂತ್ರಿಗಳಿಗೆ ಸವಾಲು ಹಾಕಿದ ಅವರು, ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತಪತ್ರ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.
Advertisement