
ತಮ್ಮ ತಂದೆ ರಾಜಕೀಯ ಜೀವನದ ಅಂತಿಮ ಹಂತದಲ್ಲಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ರಾಜ್ಯದಲ್ಲಿ ಸರ್ಕಾರದ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳಿಗೆ ಪುಷ್ಠಿ ನೀಡಿದೆ. ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ತಮ್ಮ ತಂದೆಯ ಪರಂಪರೆಯನ್ನು ಮುಂದುವರಿಸಲು ಸಂಭಾವ್ಯ ಉತ್ತರಾಧಿಕಾರಿಯಾಗಬಹುದು ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ಸಿಎಂ ಉತ್ತರಾಧಿಕಾರಿ ಬಗ್ಗೆ ಪಕ್ಷ ನಿರ್ಧಾರ ಮಾಡಬೇಕು. ಯತೀಂದ್ರ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಅಂತಿಮವಾಗಿ ಪಕ್ಷ, ಶಾಸಕರು ತೀರ್ಮಾನ ಮಾಡುವುದು. ರಾಜ್ಯದಲ್ಲಿ ಸಿಎಂ ಉತ್ತರಾಧಿಕಾರಿ ಯಾರಾಗಬೇಕೆಂಬ ಬಗ್ಗೆ ಬಹಳ ದಿನಗಳಿವೆ, ಕಾದುನೋಡೋಣ ಎಂದು ಹೇಳಿದ್ದಾರೆ. ಯತೀಂದ್ರ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಯತೀಂದ್ರ ಅವರು ಏನು ಹೇಳಿದರು ಎಂದು ನೀವು ಅವರನ್ನೇ ಕೇಳಬೇಕು, ನನಗೆ ಯಾರು ಏನು ಹೇಳಿದರು ಎಂಬುದು ಮುಖ್ಯವಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಈಗಾಗಲೇ ಪಕ್ಷದ ಹೈಕಮಾಂಡ್‌ಗೆ ವಿಧೇಯರಾಗಿ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿರುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಕೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಸಚಿವ ಪರಮೇಶ್ವರ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಇನ್ನು ಈ ಹೇಳಿಕೆ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿದ್ದು, ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯಾದ್ಯಂತ ನಡೆಸುತ್ತಿರುವ ದೇವಸ್ಥಾನಗಳ ಭೇಟಿ ಬಿಟ್ಟು, ಇಟಲಿ ಮಾತೆಯ ಟೆಂಪಲ್ ಸುತ್ತಿದರೆ ಮುಖ್ಯಮಂತ್ರಿ ಆಗುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಲೇವಡಿ ಮಾಡಿದ್ದಾರೆ.
ಮೈಸೂರಿನಲ್ಲಿ ಅಕ್ರಮ ಲಿಂಗ ಪತ್ತೆ ಪರೀಕ್ಷೆ ಮತ್ತು ಹೆಣ್ಣು ಭ್ರೂಣ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದಡಿ ಐವರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿ ಈ ಗ್ಯಾಂಗ್ ಕಾರ್ಯಾಚರಣೆ ನಡೆಸುತಿತ್ತು. ಅಕ್ರಮ ಲಿಂಗ ಪತ್ತೆ ಪರೀಕ್ಷೆ ಮತ್ತು ಭ್ರೂಣ ಹತ್ಯೆಯ ಬಗ್ಗೆ ಸುಳಿವು ಸಿಕ್ಕಿ ನಂತರ ಬನ್ನೂರು ಹೆದ್ದಾರಿಯ ಹುನಗನಹಳ್ಳಿ ಗ್ರಾಮದ ತೋಟದ ಮನೆ ಮೇಲೆ ಬುಧವಾರ ಸಂಜೆ ದಾಳಿ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿರುವುದಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ವಿವರಗಳನ್ನು ದಿನೇಶ್ ಗುಂಡೂರಾವ್, ಸಾಮಾಜಿಕ ಮಾಧ್ಯಮ ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಆಳಂದ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಮತಗಳನ್ನು ಅಳಿಸಲು 'ಪ್ರಯತ್ನಗಳು' ನಡೆದಿರುವುದನ್ನು ಬಯಲಿಗೆಳೆದಿದ್ದು ಹಗರಣದಲ್ಲಿ ಭಾಗಿಯಾಗಿರುವ ಕನಿಷ್ಠ ಆರು ಶಂಕಿತರನ್ನು ಪತ್ತೆಹಚ್ಚಿದೆ. ಯಶಸ್ವಿಯಾಗಿ ಅಳಿಸಲಾದ ಪ್ರತಿ ಮತಕ್ಕೂ ಶಂಕಿತರಿಗೆ 80 ರೂ.ಗಳನ್ನು ನೀಡಲಾಗಿದೆ ಎಂದು ಅಪರಾಧ ತನಿಖಾ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ. 6,994 ಮತಗಳನ್ನು ಅಳಿಸಲು ವಿನಂತಿಗಳು ಬಂದಿದ್ದವು. ಅವುಗಳಲ್ಲಿ ಕೆಲವನ್ನು ಹೊರತುಪಡಿಸಿ, ಬಹುತೇಕ ವಿನಂತಿಗಳು ನಕಲಿಯಾಗಿದ್ದವು ಎಂಬ ಮಾಹಿತಿ ಲಭ್ಯವಾಗಿದೆ. ಈ ಮಧ್ಯೆ, ಸುಭಾಷ್ ಗುತ್ತೇದಾರ್ ಅವರ ಮನೆಯ ಬಳಿ ಸುಟ್ಟುಹೋದ ಮತದಾರರ ದಾಖಲೆಗಳನ್ನು ಎಸ್‌ಐಟಿ ಪತ್ತೆ ಮಾಡಿದೆ.
ಬಿಗ್ ಬಾಸ್ ಕನ್ನಡ ಸೀಸನ್ 12 ಮತ್ತೊಂದು ವಿವಾದಕ್ಕೆ ತುತ್ತಾಗಿದ್ದು ಈ ಬಾರಿ ಸ್ಪರ್ಧಿಯೊಬ್ಬರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಬಿಗ್‌ಬಾಸ್ ಸೀಸನ್ 12ರಲ್ಲಿ ತಮ್ಮ ಸಹಸ್ಪರ್ಧಿಯನ್ನು ನಿಂದಿಸಿದ ಆರೋಪದಲ್ಲಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ. ಹಿರಿಯ ವಕೀಲ ಪ್ರಶಾಂತ್ ಮೆತಲ್ ಎಂಬುವವರು ಅಶ್ವಿನಿ ಗೌಡ ವಿರುದ್ಧ ಜಾತಿ ನಿಂದನೆ, ವ್ಯಕ್ತಿ ನಿಂದನೆ ಆರೋಪದಡಿ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದ್ದು, ಮಹಿಳೆಯ ಮನೆಗೆ ನುಗ್ಗಿದ ಗುಂಪೊಂದು ಸಾಮೂಹಿಕ ಅತ್ಯಾಚಾರವೆಸಗಿದೆ. ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ವಾಸವಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಈ ಕೃತ್ಯ ನಡೆದಿದೆ. ಸಂತ್ರಸ್ತೆ ನೀಡಿರುವ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಆರೋಪಿಗಳಿಗಾಗಿ ಶೋಧಕಾರ್ಯಾಚರಣೆ ಮುಂದುವರೆದಿದೆ.
Advertisement