

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ ಕನ್ನಡಿಗರೂ ಕೂಡ ಇರುವ ಸಾಧ್ಯತೆಗಳಿದ್ದು, ವಿಶೇಷ ತಂಡ ರವಾನಿಸಿ ಪರಿಹಾರ ಘೋಷಿಸುವಂತೆ ಬಿಜೆಪಿ ಶುಕ್ರವಾರ ಆಗ್ರಹಿಸಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಕರ್ನೂಲು ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹೊತ್ತಿ ಉರಿದು 20ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿರುವ ಸುದ್ದಿ ತಿಳಿದು ಆಘಾತವಾಯಿತು ಎಂದು ಹೇಳಿದ್ದಾರೆ.
ಪ್ರಯಾಣಿಕರಲ್ಲಿ ಹಲವಾರು ಕನ್ನಡಿಗರು ಹಾಗೂ ಬೆಂಗಳೂರು ನಿವಾಸಿಗಳು ಇರುವ ಸಾಧ್ಯತೆ ಇದ್ದು, ಈ ದುರಂತದಲ್ಲಿ ಮೃತಪಟ್ಟವರ ಗುರುತು ಪತ್ತೆಗಾಗಿ ಮತ್ತು ಗಾಯಗೊಂಡವರ ಚಿಕಿತ್ಸೆಗಾಗಿ ರಾಜ್ಯ ಸರ್ಕಾರ ವಿಶೇಷ ತಂಡವೊಂದನ್ನು ಕಳುಹಿಸಿ ಸ್ಥಳೀಯ ಆಡಳಿತಕ್ಕೆ ನೆರವು ನೀಡಬೇಕು ಮತ್ತು ಮೃತ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆಂದು ತಿಳಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪೋಸ್ಟ್ ಮಾಡಿ, ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಆಂಧ್ರಪ್ರದೇಶದ ಕರ್ನೂಲು ಬಳಿ ಅಪಘಾತಕ್ಕೀಡಾಗಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 20 ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿರುವ ದಾರುಣ ಘಟನೆ ತಿಳಿದು ಅಪಾರ ದುಃಖವಾಯಿತು. ಈ ದುರಂತದಲ್ಲಿ ಮೃತರಾದವರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ಈ ದುರಂತದಲ್ಲಿ ಕರ್ನಾಟಕದವರು ಇರುವ ಸಾಧ್ಯತೆ ಇದ್ದು ರಾಜ್ಯ ಸರ್ಕಾರವು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಈ ಕೂಡಲೇ ಸ್ಥಳೀಯ ಆಡಳಿತದೊಂದಿಗೆ ಕೈ ಜೋಡಿಸಿ ನೆರವು ನೀಡಲಿ ಹಾಗೂ ಮೃತರ ಕುಟುಂಬಕ್ಕೆ ಅಗತ್ಯ ಪರಿಹಾರ ಒದಗಿಸಲಿ ಎಂದು ಆಗ್ರಹಿಸಿದ್ದಾರೆ.
ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿಯವರು ಮಾತನಾಡಿ, ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಚಿನ್ನಟೆಕೂರು ಬಳಿ ಸಂಭವಿಸಿದ ಅಗ್ನಿ ದುರಂತದಲ್ಲಿ ಅನೇಕರು ಸಾವನ್ನಪ್ಪಿರುವ ಸುದ್ದಿ ತಿಳಿದು ಅತೀವ ದುಃಖವಾಯಿತು.
ಈ ದುರದೃಷ್ಟಕರ ಘಟನೆಯಲ್ಲಿ ಅನೇಕ ಜನರು ತಮ್ಮ ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವುದು ಮತ್ತು ಗಾಯಗೊಂಡಿರುವುದು ತೀವ್ರ ದುಃಖಕರವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಪ್ರತಿಕ್ರಿಯಿಸಿ, ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸು ಒಂದು ಆಂಧ್ರ ಪ್ರದೇಶದ ಕರ್ನೂಲು ಬಳಿ ಬೆಂಕಿಗೆ ಆಹುತಿಯಾಗಿ ಅನೇಕ ಪ್ರಯಾಣಿಕರು ಸಜೀವ ದಹನ ಆಗಿರುವ ಸುದ್ದಿ ತಿಳಿದು ತೀವ್ರ ಆಘಾತ ಉಂಟಾಯಿತು. ದೈವಾನುಗ್ರಹದಿಂದ ಇನ್ನೂ ಹೆಚ್ಚಿನ ಪ್ರಾಣನಷ್ಟ ಆಗದಿರಲಿ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
Advertisement