

ಬೆಂಗಳೂರು: ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ವಿಚಾರ ಕುರಿತು ರಾಜ್ಯ ಕಾಂಗ್ರೆಸ್ ನಲ್ಲಿ ಚರ್ಚೆಗಳು ನಡೆಯುತ್ತಿರುವ ನಡುವಲ್ಲೇ ನವೆಂಬರ್ ತಿಂಗಳಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಉತ್ತರಾಧಿಕಾರಿ ಎಂದು ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಈ ನಡುವಲ್ಲೇ ನವೆಂಬರ್ 19 ರಂದು ರಾಹುಲ್ ಗಾಂಧಿ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕರ್ನಾಟಕದಲ್ಲಿ ಸ್ಥಾಪನೆಯಾದ ಅಂಗನವಾಡಿಗಳ 50 ನೇ ವಾರ್ಷಿಕೋತ್ಸವದ ಅಂಗನವಾಡಿ ಕಾರ್ಯಕರ್ತರ ರ್ಯಾಲಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹೈಕಮಾಂಡ್ ನಾಯಕರನ್ನು ಆಹ್ವಾನಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರನ್ನು ಸಹ ಆಹ್ವಾನಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ನವೆಂಬರ್ 15 ರಂದು ಸಿಎಂ ದೆಹಲಿ
ಏತನ್ಮಧ್ಯೆ ನವೆಂಬರ್ 14 ರಂದು ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟವಾದ ಮರುದಿನ, ನವೆಂಬರ್ 15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರ ರಾಜಧಾನಿಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಭೇಟಿ ವೇಳೆ ಮುಖ್ಯಮಂತ್ರಿಗಳು ಸಚಿವ ಸಂಪುಟ ಪುನಾರಚನೆ ಕುರಿತು ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸುವ ನಿರೀಕ್ಷೆಯಿದೆ.
ಈ ಬಾರಿ ಸಚಿವ ಸಂಪುಟ ಪುನಾರಚನೆಯಾದರೆ ಹೊಸ ಮುಖಗಳಿಗೆ ದಾರಿ ಮಾಡಿಕೊಡಲು ಸುಮಾರು 10 ಸಚಿವರನ್ನು ಕೈಬಿಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಕುತೂಹಲಕಾರಿ ವಿಚಾರವೆಂದರೆ ಸಿದ್ದರಾಮಯ್ಯ ಅವರ ಆಪ್ತ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಅವರು ಶುಕ್ರವಾರ ದೆಹಲಿಗೆ ಭೇಟಿ ನೀಡಿದ್ದರು.
ಇಡಿ ಜೊತೆಗಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಮ್ಮ ಕಾನೂನು ಸಲಹೆಗಾರರನ್ನು ಭೇಟಿ ಮಾಡಲು ದೆಹಲಿಗೆ ಭೇಟಿ ನೀಡಿದ್ದಲು ಎಂದು ಹೇಳಲಾಗುತ್ತಿದೆ. ಈ ನಡುವೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕೂಡ ದೆಹಲಿಗೆ ಭೇಟಿ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.
ದೆಹಲಿಯಲ್ಲಿರುವ ಈಶ್ವರ್ ಖಂಡ್ರೆ ಅವರು, ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹೈಕಮಾಂಡ್ ನಾಯಕರೊಂದಿಗೆ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸುವ ಸಾಧ್ಯತೆಯಿದೆ.
ಈಶ್ವರ್ ಖಂಡ್ರೆ ಅವರು ಕೆಪಿಸಿಸಿ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿದ್ದು, ಇದಕ್ಕಾಗಿ ಸಚಿವ ಸ್ಥಾನವನ್ನು ತ್ಯಾಗ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
Advertisement