

ಬೆಂಗಳೂರು: ಮೊಂತಾ ಚಂಡಮಾರುತದ ಪ್ರಭಾವ ಕರ್ನಾಟಕ ರಾಜ್ಯದ ಮೇಲೆ ಕೂಡ ಆಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದ. ರಾಜ್ಯದಲ್ಲಿ ವರುಣಾರ್ಭಟ (Weather Forecast) ಹೆಚ್ಚಿರಲಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಉಳಿದೆಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ. ಬೆಂಗಳೂರಿನಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಶುರುಮಾಡಿದೆ. ಅದರಲ್ಲೂ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇದಕ್ಕೆ ಕಾರಣ ಬಂಗಾಳ ಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತ.ಕರಾವಳಿ ಭಾಗದ ಜನರಿಗೆ ಇದೊಂದು ಮಹತ್ವದ ಮುನ್ನೆಚ್ಚರಿಕೆ.
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ 'ಮೋಂತಾ' ಎಂಬ ಚಂಡಮಾರುತ ತನ್ನ ರೌದ್ರಾವತಾರವನ್ನು ತಾಳುತ್ತಿದ್ದು, ಭಾರತದ ಪೂರ್ವ ಕರಾವಳಿಯತ್ತ ವೇಗವಾಗಿ ಮುನ್ನುಗ್ಗುತ್ತಿದೆ. ಈಗಾಗಲೇ ಆಂಧ್ರಪ್ರದೇಶ, ಒಡಿಶಾ ಮತ್ತು ತಮಿಳುನಾಡಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಇದರ ನೇರ ಪರಿಣಾಮ ಕರ್ನಾಟಕದ ಮೇಲೂ ಆಗಲಿದೆ. ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭಾರಿ ಮುನ್ನೆಚ್ಚರಿಕೆ ನೀಡಿದೆ.
ಎಲ್ಲೆಲ್ಲಿ ಮಳೆ?
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿಯಲ್ಲಿ 30-40 ಕೀಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದ್ದು, ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ , ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಲ್ಲಿ ಮಳೆ
ಬೆಂಗಳೂರಿನಲ್ಲಿ ಇಂದು ಶೇ. 60 ರಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಮೋಡ ಕವಿದ ವಾತಾವರಣವಿರಲಿದೆ. ನಗರದ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 3 ದಿನಗಳು ಮಳೆ
ಮೊಂತಾ ಚಂಡಮಾರುತ ಹಿನ್ನಲೆ ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ಸೇರಿದಂತೆ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ದಾವಣಗೆರೆಯಲ್ಲೂ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Advertisement