
ಬೆಂಗಳೂರು: ಹನುಮಂತನ ಜನ್ಮಸ್ಥಳವೆಂದು ನಂಬಲಾಗಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟವನ್ನು ವಿಶ್ವಮಟ್ಟದ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅಂಜನಾದ್ರಿ ಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಈ ವೇಳೆ, ಪ್ರವಾಸೋದ್ಯಮದ ಜೊತೆಗೆ ಈ ಸ್ಥಳದ ಪೌರಾಣಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಎತ್ತಿಹಿಡಿಯುವಂತೆ ಅಭಿವೃದ್ಧಿಪಡಿಸಲು ನಿರ್ದೇಶನ ನೀಡಿದ್ದಾರೆ.
ಹಿರಿಯ ನಾಗರಿಕರು ಸಹ ಅಂಜನಾದ್ರಿ ಬೆಟ್ಟದ ಮೇಲೆ ಹೋಗಿ ಆಂಜನೇಯನ ದರ್ಶನ ಪಡೆಯಲು ಅಗತ್ಯ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಪ್ರದಕ್ಷಿಣೆ ಮಾರ್ಗದ ನಿರ್ಮಾಣದ ಬಗ್ಗೆ ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಿಎಂ ಚರ್ಚಿಸಿದರು.
ಹನುಮ ಜಯಂತಿಯ ಸಮಯದಲ್ಲಿ ಲಕ್ಷಗಟ್ಟಲೆ ಜನರು ಈ ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸುತ್ತಾರೆ. ಆದ್ದರಿಂದ, ಇಲ್ಲಿ ಭಕ್ತರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅತ್ಯಗತ್ಯ. ಈ ಬಗ್ಗೆ ಎಲ್ಲಾ ಕ್ರಮಕೈಗೊಳ್ಳುವಂತೆ ಅಧಿಕಾರಿಗಳು ಸಿಎಂ ಸೂಚನೆ ನೀಡಿದರು.
ಯಾತ್ರಿಕರಿಗೆ ತಂಗಲು ವಸತಿ ಸೌಲಭ್ಯ, ಹಿರಿಯ ಭಕ್ತರು ಬೆಟ್ಟವನ್ನು ಹತ್ತಲು ಮೆಟ್ಟಿಲುಗಳು, ಸಮುದಾಯ ಭವನ ನಿರ್ಮಾಣ ಮತ್ತು ಇತರ ಪ್ರವಾಸಿ ಸೌಲಭ್ಯಗಳನ್ನು ಈ ಪ್ರದೇಶದಲ್ಲಿ ಅಭಿವೃದ್ಧಿಪಡಿಸಬೇಕು ಎಂದು ಸಿದ್ದರಾಮಯ್ಯ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಂತ-1 ಮತ್ತು ಹಂತ-2 ರ ಅಡಿಯಲ್ಲಿ 200 ಕೋಟಿ ರೂ. ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದ್ದು, ಇಲ್ಲಿಯವರೆಗೆ 10 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
ಉಳಿದ ಹಣವನ್ನು ಬಿಡುಗಡೆ ಮಾಡಲು ಹಣಕಾಸು ಇಲಾಖೆಯಿಂದ ಹೆಚ್ಚುವರಿ ಅನುದಾನ ನೀಡಬೇಕಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಮಂಜೂರಾಗಿರುವ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಿ ಜಮೀನಿನ ಕೊರತೆ ಇರುವುದರಿಂದ, ಪ್ರಸ್ತಾಪಿಸಿರುವ 77.28 ಖಾಸಗಿ ಜಮೀನನ್ನು ಅನುದಾನದ ಕೊರತೆಯಿರುವುದರಿಂದ ಈವರೆಗೂ ಭೂ-ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿರುವುದಿಲ್ಲ. ಆದ್ದರಿಂದ, ಹೆಚ್ಚುವರಿ ಜಮೀನು ಒಳಗೊಂಡಂತೆ ಒಟ್ಟು 101 ಎಕರೆ 30 ಗುಂಟೆ ಖಾಸಗಿ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಾಗಿರುವ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಒದಗಿಸಲಾಗುವುದು.
ಮಂಜೂರಾಗಿರುವ ಬಹುತೇಕ ಕಾಮಗಾರಿಗಳನ್ನು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನುಗಳಲ್ಲಿ ಕೈಗೊಳ್ಳಬೇಕಿರುವುದರಿಂದ, ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯ NOC ನೀಡಬೇಕಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.
Advertisement