
ಬೆಂಗಳೂರು: ಆರ್‌ಎಂಸಿ ಯಾರ್ಡ್ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲಿನ ಅತ್ಯಾಚಾರ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ.
ಮಾಜಿ ಸಂಸದರು/ಶಾಸಕರ ವಿರುದ್ಧದ ಪ್ರಕರಣಗಳನ್ನು ವಿಚಾರಣೆ ನಡೆಸುತ್ತಿರುವ ಎಸ್‌ಐಟಿ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ.
ಪ್ರಕರಣದಲ್ಲಿ ಯಾವುದೇ ಪುರಾವೆಗಳು ಕಂಡುಬಂದಿಲ್ಲವಾದ್ದರಿಂದ, ತನಿಖೆಯ ನಂತರ 'ಬಿ' ವರದಿಯನ್ನು ಸಲ್ಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಏತನ್ಮಧ್ಯೆ, ಆರ್‌ಎಂಸಿ ಯಾರ್ಡ್ ಪೊಲೀಸರು ದಾಖಲಿಸಿರುವ ಅಪರಾಧದ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಮುನಿರತ್ನ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಪ್ರಕರಣದಲ್ಲಿ ಪೊಲೀಸರು 'ಬಿ' ವರದಿಯನ್ನು ಸಲ್ಲಿಸಿದ್ದಾರೆ ಎಂದು ಸರ್ಕಾರಿ ವಕೀಲರು ತಿಳಿಸಿದ ನಂತರ ನ್ಯಾಯಮೂರ್ತಿ ಎಂಐ ಅರುಣ್ ವಿಚಾರಣೆಯನ್ನು ಮುಂದೂಡಿದರು.
ಶಾಸಕ ಮತ್ತು ಅವರ ಸಹಚರರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು 40 ವರ್ಷದ ಮಹಿಳೆಯೊಬ್ಬರು ಆರೋಪಿಸಿದ್ದರು. ಅಲ್ಲದೆ, ವಿಚಾರ ಬಾಯ್ಬಿಟ್ಟರೆ ಸೋಂಕು ತಗುಲಿಸಿ, ಕೊಲೆ ಬೆದರಿಕೆಯನ್ನೂ ಹಾಕಿದ್ದರು ಎಂದು ಆರೋಪಿಸಿದ್ದರು.
ಇದರ ಬೆನ್ನಲ್ಲೇ ಕಳೆದ ವರ್ಷ ರಾಜ್ಯ ಸರ್ಕಾರವು ಶಾಸಕ ಮುನಿರತ್ನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಅಪರಾಧಗಳು ಮತ್ತು ಅತ್ಯಾಚಾರ ಪ್ರಕರಣಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.
Advertisement