
ರಾಯಚೂರು: ರಾಯಚೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಈ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಯಚೂರಿನ ಗಂಗಾ ನಿವಾಸ ರಸ್ತೆಯಲ್ಲಿ ಈ ಹಿಂದೆ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ನಡೆಯುವ ವೇಳೆ ಇಬ್ಬರು ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದರು.
ಗಣೇಶ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಬರುತ್ತಿರುವ ವೇಳೆ ಸಮೀಪದ ಅಂಗಡಿ ಮೇಲೆ ಹತ್ತಿದ್ದ ಇಬ್ಬರು ದುಷ್ಕರ್ಮಿಗಳು ನೋಡ ನೋಡುತ್ತಲೇ ಕಲ್ಲು ತೆಗೆದುಕೊಂಡು ಮೆರವಣಿಗೆಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದರು.
ಈ ವೇಳೆ ಮಂಗಳವಾರ ಪೇಟೆ ನಿವಾಸಿಗಳಾದ ವಿನಯ್ ಮತ್ತು ಗಣೇಶ್ ಎಂಬುವವರಿಗೆ ಗಾಯಗಳಾಗಿದ್ದವು. ಗಾಯಾಳುಗಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ವಿಡಿಯೋ ವೈರಲ್
ಆರೋಪಿಗಳು ಕಲ್ಲು ತೂರಾಟ ಮಾಡುತ್ತಿರುವುದನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದರು. ಬಳಿಕ ಸ್ಥಳೀಯರ ಇಬ್ಬರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸದರ್ ಬಜಾರ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸ್ಥಳೀಯ ನಿವಾಸಿಗಳಾದ ಪ್ರಶಾಂತ್ ಮತ್ತು ಪ್ರವೀಣ್ ಎಂದು ಗುರುತಿಸಲಾಗಿದೆ.
ಹಳೇದ್ವೇಷದ ಹಿನ್ನಲೆಯಲ್ಲಿ ಕಲ್ಲು ತೂರಾಟ
ಇನ್ನು ಬಂಧಿತ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಆರೋಪಿಗಳು ಸತ್ಯಾಂಶ ಬಾಯಿ ಬಿಟ್ಟಿದ್ದು, ಹಳೆ ದ್ವೇಷದ ಹಿನ್ನಲೆಯಲ್ಲಿ ಕಲ್ಲು ತೂರಿದ್ದಾಗಿ ಹೇಳಿಕೊಂಡಿದ್ದಾರೆ.
ಕಲ್ಲು ತೂರಾಟದಲ್ಲಿ ಗಾಯಾಳುಗಳಾಗಿರುವ ವಿನಯ್ ಮತ್ತು ಗಣೇಶ್ ಜೊತೆಗೆ ಬಂಧಿತ ಸ್ಥಳೀಯ ನಿವಾಸಿಗಳಾದ ಪ್ರಶಾಂತ್ ಮತ್ತು ಪ್ರವೀಣ್ ಜಗಳ ಮಾಡಿಕೊಂಡಿದ್ದರು. ತಮ್ಮ ಏರಿಯಾ ಮೂಲಕ ಗಣೇಶ ಮೆರವಣಿಗೆ ಮಾಡಬಾರದು ಎಂದು ಜಗಳ ಮಾಡಿದ್ದರು.
ಇದೇ ಕಾರಣಕ್ಕೆ ಇದೀಗ ಅವರ ಏರಿಯಾದಲ್ಲಿ ಗಣೇಶ ವಿಸರ್ಜನೆ ಮಾಡಬಾರದು ಎಂದು ಕಲ್ಲು ತೂರಿದ್ದಾಗಿ ಹೇಳಿದ್ದಾರೆ ಎನ್ನಲಾಗಿದೆ.
Advertisement