ಮಂಡ್ಯ ಜಿಲ್ಲೆಯ ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿರುವಾಗ ಕಲ್ಲು ತೂರಾಟ ನಡೆದಿದೆ. ಮಸೀದಿಯಿಂದಲೇ ಲೈಟ್ ಆಫ್ ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಮೆರವಣಿಗೆಯಲ್ಲಿದ್ದವರು ಆರೋಪಿಸಿದ್ದಾರೆ. ಬೀದಿಗಳಲ್ಲಿ ಮೆರವಣಿಗೆ ಮೂಲಕ ಗಣಪನನ್ನು ತರುವ ವೇಳೆ ಮಸೀದಿ ಮುಂದೆ ಹಾದುಹೋಗಬೇಕೆನ್ನುವಷ್ಟರಲ್ಲಿ, ದಿಢೀರ್ ಲೈಟ್ ಆಫ್ ಆಗಿದೆ. ಮಸೀದಿಯಿಂದ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ದೊಣ್ಣೆಗಳನ್ನು ಕೂಡ ಎಸೆದಿದ್ದಾರೆ ಎಂದು ಸ್ಥಳದಲ್ಲಿದ್ದವರು ಆರೋಪಿಸಿದ್ದಾರೆ. ಘಟನೆಯಲ್ಲಿ 15 ಯುವಕರು ಮತ್ತು 10 ಪೊಲೀಸರು ಗಾಯಗೊಂಡಿದ್ದಾರೆ. ಕಲ್ಲು ತೂರಾಟ ವಿರೋಧಿಸಿ ಇಂದು ಮಹಿಳೆಯರು-ಮಕ್ಕಳು ಸೇರಿದಂತೆ ಸಾವಿರಾರೂ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಇದರಿಂದ ಮದ್ದೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ರೂಪುಗೊಂಡಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಇನ್ನು ಘಟನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಪೊಲೀಸ್ ಮಹಾನಿರ್ದೇಶಕ DGP ಸಲೀಂ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದು ಪರಿಸ್ಥಿತಿಯನ್ನು ತಕ್ಷಣ ನಿಯಂತ್ರಣಕ್ಕೆ ತರಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಪ್ರಕರಣ ಸಂಬಂಧ ಕಲ್ಲು ತೂರಿದ್ದ 25 ಯುವಕರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದ್ದು ಅವರಿಗೆ ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಮದ್ದೂರಿನ ಕೋಮು ಹಿಂಸಾಚಾರ ಕುರಿತಂತೆ ಬಿಜೆಪಿ ಮತ್ತು ಜೆಡಿಎಸ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಕಾಂಗ್ರೆಸ್ ಸರ್ಕಾರದ ತುಷ್ಠೀಕರಣ ರಾಜಕೀಯದಿಂದ ದುಷ್ಕರ್ಮಿಗಳಿಗೆ ಗಲಾಟೆ ಮಾಡಲು ಧೈರ್ಯ ಬರುತ್ತಿದೆ. ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಪರಿಗಣಿಸುವ ಒಂದು ವಿಶಿಷ್ಟ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ. ಧರ್ಮಸ್ಥಳ ನಂತರ ಮೈಸೂರು ಚಾಮುಂಡೇಶ್ವರಿ ದೇವಿ ಈಗ ಮದ್ದೂರು ಘಟನೆ ಮೂಲಕ ಸಿದ್ದರಾಮಯ್ಯ ದೇವರಿಗೆ ಅವಮಾನ ಮಾಡಿದ್ದು ಇದಕ್ಕೆ ಕ್ಷಮೆಯಾಚಿಸಬೇಕು ಎಂದರು. ಮತ್ತೊಂದೆಡೆ, ಶಾಂತಿಗೆ ಹೆಸರಾದ ಮಂಡ್ಯ ಜಿಲ್ಲೆಯಲ್ಲಿ ಅಶಾಂತಿ ತಲೆದೋರಿದ್ದು, ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ. ರಾಜ್ಯದ ಮುಖ್ಯಮಂತ್ರಿ, ಗೃಹಸಚಿವರು ಅಸಮರ್ಥರಾಗಿದ್ದಾರೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮದ್ದೂರಿನಲ್ಲಿ ಗಲಾಟೆ ಮಾಡಿದವರನ್ನು ಬಂಧಿಸಲಾಗಿದೆ. ರಾಜ್ಯದ ಕೆಲವು ಕಡೆ ಗಣೇಶ ವಿಸರ್ಜನೆ ವೇಳೆ ಕೆಲವು ಸಣ್ಣ ಪುಟ್ಟ ಘಟನೆಗಳಾಗಿವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ರಾಜ್ಯದಲ್ಲಿ ಅತಿವೃಷ್ಠಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಮಳೆಯಿಂದ ಹಾನಿಗೀಡಾಗಿರುವ ಬೆಳೆ ಹಾಗೂ ಮನೆಗಳಿಗೆ ಸೂಕ್ತ ಪರಿಹಾರವನ್ನು ನೀಡುವಂತೆ ಸೂಚಿಸಿದರು. ಮಳೆಗೆ ಸಂಬಂಧಿಸಿದಂತೆ ಏಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೂ ರಾಜ್ಯದಲ್ಲಿ ಒಟ್ಟು 111 ಮಂದಿ ಸಾವನ್ನಪ್ಪಿದ್ದು ಎಲ್ಲ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದೆ. ಒಟ್ಟು 5.55 ಕೋಟಿ ರೂ. ಪರಿಹಾರ ನೀಡಲಾಗಿದೆ. ಮಳೆಯಿಂದ 651 ಮನೆಗಳು ಸಂಪೂರ್ಣ ಹಾನಿಯಾಗಿದ್ದು, 9087 ಮನೆಗಳು ಭಾಗಶಃ ಹಾನಿಯಾಗಿವೆ. ಸಂಪೂರ್ಣ ಹಾನಿಯಾದ 649 ಮನೆಗಳಿಗೆ ಹಾಗೂ ಭಾಗಶಃ ಹಾನಿಯಾದ 8068 ಮನೆಗಳಿಗೆ ಪರಿಹಾರ ಪಾವತಿಸಲಾಗಿದೆ ಎಂದರು. 4.80 ಲಕ್ಷ ಹೆಕ್ಟೇರ್ ಕೃಷಿ ಬೆಳೆಗಳು ಮತ್ತು 40,407 ಹೆಕ್ಟೇರ್ ತೋಟಗಾರಿಕಾ ಬೆಳೆಗಳು ಸೇರಿದಂತೆ 5.20 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಬೆಳೆ ಹಾನಿಯಾಗಿದೆ ಎಂದು ಸಿಎಂ ತಿಳಿಸಿದರು.
ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಪಪ್ಪಿಗೆ ಕೋರ್ಟ್ ಸೆ. 22ರವರೆಗೆ ಅಂದರೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಜಾರಿ ನಿರ್ದೇಶನಾಲಯ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಪಪ್ಪಿಯನ್ನು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇಡಿ ದಾಳಿ ವೇಳೆ ವೀರೇಂದ್ರ ಪಪ್ಪಿ ಮನೆಯಲ್ಲಿ ಒಂದು ಕೋಟಿ ರೂ. ವಿದೇಶಿ ಕರೆನ್ಸಿ ಸೇರಿ 12 ಕೋಟಿ ರೂ. ನಗದು, 6 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಸುಮಾರು 10 ಕೆಜಿ ಬೆಳ್ಳಿ ಮತ್ತು ನಾಲ್ಕು ವಾಹನಗಳನ್ನು ವಶಪಡಿಸಿಕೊಂಡಿತ್ತು.
Advertisement