
ಮಂಡ್ಯ: ಗಣೇಶ ವಿಸರ್ಜನೆ ವೇಳೆ ಗುಂಪು ಘರ್ಷನೆ ಪ್ರಕರಣ ಮತ್ತೊಂದು ಕಳೆದ ರಾತ್ರಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ನಿನ್ನೆ ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿರುವಾಗ ಕಲ್ಲು ತೂರಾಟ ನಡೆದಿದೆ.
ಮಸೀದಿಯಿಂದಲೇ ಲೈಟ್ ಆಫ್ ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಮೆರವಣಿಗೆಯಲ್ಲಿದ್ದವರು ಆರೋಪಿಸಿದ್ದಾರೆ. ಬೀದಿಗಳಲ್ಲಿ ಮೆರವಣಿಗೆ ಮೂಲಕ ಗಣಪನನ್ನು ತರುವ ವೇಳೆ ಮಸೀದಿ ಮುಂದೆ ಹಾದುಹೋಗಬೇಕೆನ್ನುವಷ್ಟರಲ್ಲಿ, ದಿಢೀರ್ ಲೈಟ್ ಆಫ್ ಮಾಡಿ ಮಸೀದಿಯಿಂದ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ದೊಣ್ಣೆಗಳನ್ನು ಕೂಡ ಎಸೆದಿದ್ದಾರೆ ಎಂದು ಸ್ಥಳದಲ್ಲಿದ್ದವರು ಆರೋಪಿಸಿದ್ದಾರೆ. ಘಟನೆಯಲ್ಲಿ ನಾಲ್ವರು ಹೋಂಗಾರ್ಡ್ಗಳು ಸೇರಿ 8 ಜನರು ಗಾಯಗೊಂಡಿದ್ದಾರೆ.
ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಅದರಂತೆ ಮೈಕ್ ಆಫ್ ಮಾಡಿ ಮೆರವಣಿಗೆ ಮಾಡಲಾಗುತ್ತಿತ್ತು. ಇದಾದ ಬಳಿಕ ಏಕಾಏಕಿ ಲೈಟ್ ಆಫ್ ಮಾಡಿ ಗಣಪತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಾಟ ಮಾಡಲಾಗಿದೆ ಎಂದು ಹಿಂದೂಗಳು ಆರೋಪಿಸಿದ್ದಾರೆ.
ಸ್ಥಳಕ್ಕೆ ಮಂಡ್ಯ ಎಸ್‌ಪಿ ಬಾಲದಂಡಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಕಳೆದ ವರ್ಷ ನಾಗಮಂಗಲದಲ್ಲಿ ಇದೇ ರೀತಿ ಗಲಭೆ ನಡೆದಿತ್ತು. ನಿನ್ನೆಯ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಮದ್ದೂರಿನಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ.
ಅಂಗಡಿಗಳು ಬಂದ್
ಘಟನೆ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಿಂದ ಪೇಟೆಯ ರಸ್ತೆಗಳಲ್ಲಿನ ಎಲ್ಲಾ ಅಂಗಡಿಗಳನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಸದ್ಯ ಮದ್ದೂರಿನಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದು, ನಾಳೆ ಕೂಡ ಮುಂದುವರಿಯಲಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿ ತಿಮ್ಮಯ್ಯ, ಮಂಡ್ಯ ಡಿವೈಎಸ್ಪಿ ಲಕ್ಷ್ಮಿನಾರಾಯಣ ಪ್ರಸಾದ್, ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ ಆಗಮಿಸಿ ಪರಿಶೀಲಿಸಿ ಮಾಹಿತಿ ಪಡೆದಿದ್ದು, ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸ್ ಅಧಿಕಾರಿಗಳು ಸೇರಿದಂತೆ 1 ಕೆಎಸ್‌ಆರ್‌ಪಿ, ಡಿಎಆರ್ ತಂಡವನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಗಣೇಶನ ವಿಗ್ರಹದ ಮೇಲೆ ಉಗುಳಿದ ಹುಡುಗರು
ಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಇಬ್ಬರು ಬಾಲಕರು ಗಣಪತಿ ಮೂರ್ತಿಯ ಮೇಲೆ ಉಗುಳಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ ನಿನ್ನೆ ಭಾನುವಾರ ನಡೆದಿದ್ದು, ಕೆಲಕಾಲ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಘಟನೆ ಸಂಬಂಧ ಪೊಲೀಸರು ಬಾಲಕರನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಬಾಲಕರ ತಾಯಿ ಖೈರುನ್ನೀಸಾ ಹಿಂದೂ ಸಮಾಜದ ಕ್ಷಮೆಯಾಚಿಸಿದ್ದಾರೆ.
Advertisement