ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತ, ವಾಪಸ್ ಕರೆತರಲು ಕ್ರಮ: ಮುಖ್ಯಮಂತ್ರಿ ಕಚೇರಿ

ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಸಚಿವಾಲಯದೊಂದಿಗೆ ಸಂಪರ್ಕದಲ್ಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ಕನ್ನಡಿಗರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ
Nepal protest
ನೇಪಾಳದಲ್ಲಿ ಪ್ರತಿಭಟನೆ
Updated on

ಬೆಂಗಳೂರು: ಹಿಂಸಾಚಾರ ಪೀಡಿತ ನೇಪಾಳದಲ್ಲಿ ಸಿಲುಕಿರುವ ರಾಜ್ಯದ ಜನರು ಸುರಕ್ಷಿತವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ಬುಧವಾರ ತಿಳಿಸಿದೆ.

ಸಾಮಾಜಿಕ ಮಾಧ್ಯಮಗಳ ನಿರ್ಬಂಧವನ್ನು ವಿರೋಧಿಸಿ ಸರ್ಕಾರದ ವಿರುದ್ಧ ನಡೆಯುತ್ತಿರುವ ಯುವ ಜನರ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ. ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ ನೀಡಿದ ನಂತರ ಮಂಗಳವಾರ ನೇಪಾಳದಲ್ಲಿ ರಾಜಕೀಯ ಪರಿಸ್ಥಿತಿ ಉಲ್ಬಣಗೊಂಡಿದೆ.

ಪ್ರತಿಭಟನಾಕಾರರು ಹಿರಿಯ ನಾಯಕರ ನಿವಾಸಗಳಿಗೆ ಬೆಂಕಿ ಹಚ್ಚಿದ್ದಾರೆ. ಪಕ್ಷದ ಕಚೇರಿಗಳಿಗೆ ನುಗ್ಗಿದ್ದಾರೆ, ಸಂಸತ್ತನ್ನು ಧ್ವಂಸ ಮಾಡಿದ್ದಾರೆ ಮತ್ತು ಆಡಳಿತ ವ್ಯವಸ್ಥೆಯನ್ನು ಬುಡಮೇಲು ಮಾಡಿದ್ದಾರೆ. ಓಲಿ ಸರ್ಕಾರ ಸಾಮಾಜಿಕ ಮಾಧ್ಯಮದ ಮೇಲೆ ನಿಷೇಧ ಹೇರಿದ್ದು ಭಾರಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಯಿತು.

'ಇದೀಗ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿರುವ ಕನ್ನಡಿಗರೊಂದಿಗೆ ಸಂಪರ್ಕದಲ್ಲಿದ್ದಾರೆ' ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಸಚಿವಾಲಯದೊಂದಿಗೆ ಸಂಪರ್ಕದಲ್ಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ಕನ್ನಡಿಗರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅದು ತಿಳಿಸಿದೆ.

ನೇಪಾಳದಲ್ಲಿ ವಿದ್ಯಾರ್ಥಿ- ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆಯಿಂದಾಗಿ ದೇಶದಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಸೂಚಿಸಿದ್ದು, ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com