
ಕಲಬುರಗಿ: ಭಾರಿ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡುವ ಜವಾಬ್ದಾರಿ ಹೊಂದಿರುವ ಕಂದಾಯ ಮತ್ತು ಕೃಷಿ ಇಲಾಖೆಗಳಿಂದ ಜಂಟಿ ಸಮೀಕ್ಷೆಗೆ ನಿರ್ದೇಶನ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.
ಸರ್ಕಾರದಿಂದ ಬೆಳೆ ಸಾಲ ಮನ್ನಾ ನಿರೀಕ್ಷಿಸುತ್ತಿರುವ ರೈತರ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, "ನೋಡೋಣ, ನಾವು ಅದನ್ನು ಪರಿಶೀಲಿಸುತ್ತೇವೆ" ಎಂದು ಹೇಳಿದರು.
"ಮೊದಲು ಬೆಳೆ ನಷ್ಟಕ್ಕೆ ಪರಿಹಾರ ನೀಡಬೇಕು, ಆದ್ದರಿಂದ ಕಂದಾಯ ಮತ್ತು ಕೃಷಿ ಇಲಾಖೆಗಳಿಗೆ ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಿದ್ದೇನೆ. ಒಂದು ವಾರದಲ್ಲಿ ಜಂಟಿ ಸಮೀಕ್ಷೆ ನಡೆಯಲಿದೆ. ಅದರ ನಂತರ ಬೆಳೆ ನಷ್ಟ ಪರಿಹಾರವನ್ನು ವಿತರಿಸಲಾಗುವುದು" ಎಂದು ಸಿಎಂ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.
ಅತಿವೃಷ್ಟಿ ಪೀಡಿತ ಪ್ರದೇಶಗಳ ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ, ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಬೇಕು. ಮಾನವ- ಜಾನುವಾರು ಜೀವ ಹಾನಿಗಳಿಗೆ ಶೇ.100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸುತ್ತೇವೆ ಎಂದರು
ಕಳೆದ ಬಾರಿಗಿಂತ ಈ ಬಾರಿ ಉತ್ತಮ ಮಳೆ ಆಗಿದೆ. ವಾಡಿಕೆಗಿಂತ ಶೇ17 ರಷ್ಟು ಮಳೆ ಹೆಚ್ಚಾಗಿದೆ. 37 ಜನರ ಜೀವ ಹಾನಿ ಪ್ರಕರಣಗಳು ವರದಿಯಾಗಿದ್ದು, ಎಲ್ಲಾ ಪರಿಹಾರ ನೀಡಲಾಗಿದೆ.
175 ಜಾನುವಾರುಗಳ ಪ್ರಾಣ ಹಾನಿ ಪ್ರಕರಣಗಳು ವರದಿಯಾಗಿದ್ದು, ಎಲ್ಲದಕ್ಕೂ ಪರಿಹಾರ ನೀಡಲಾಗಿದೆ. ಸಂಪೂರ್ಣ ಮನೆ ಹಾನಿ, ಭಾಗಶಃ ಹಾನಿ ಆಗಿರುವ ಎಲ್ಲಾ ಪ್ರಕರಣಗಳಲ್ಲೂ ಪರಿಹಾರ ನೀಡಲಾಗಿದೆ.
"ಕೆಲವು ಸ್ಥಳಗಳಲ್ಲಿ - ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಹೆಚ್ಚಿನ ಮಳೆಯಾಗಿದ್ದು, ಬೆಳೆ ನಷ್ಟವಾಗಿದೆ. ಪರಿಹಾರವನ್ನು ತಕ್ಷಣವೇ ನೀಡಲಾಗುವುದು" ಎಂದು ಸಿಎಂ ಭರವಸೆ ನೀಡಿದರು.
ವಿಮೆ ಇಲ್ಲದ ರೈತರಿಗೆ ಪರಿಹಾರ ನೀಡಲಾಗುತ್ತದೆಯೇ ಎಂಬ ಪ್ರಶ್ನೆಗೆ, "ನಾವು ಚರ್ಚಿಸಿ ಪರಿಗಣಿಸುತ್ತೇವೆ" ಎಂದರು.
ಎನ್‌ಡಿಆರ್‌ಎಫ್ ಮಾನದಂಡಗಳ ಅಡಿಯಲ್ಲಿ ಹೆಚ್ಚಿನ ಪರಿಹಾರ ಕೋರಲು ದೆಹಲಿಗೆ ಹೋಗುತ್ತೀರಾ ಎಂದು ಕೇಳಿದಾಗ, ಸಿಎಂ, "ನಾನು ಹಲವಾರು ಬಾರಿ ದೆಹಲಿಗೆ ಭೇಟಿ ನೀಡಿದ್ದೇನೆ, ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇನೆ. ಕೇಂದ್ರ ಸರ್ಕಾರ ಪ್ರತಿಕ್ರಿಯಿಸುತ್ತಿಲ್ಲ. ಏನು ಮಾಡಬೇಕು?" ಎಂದರು.
ಇನ್ನು ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರ ಬಗ್ಗೆ ಪ್ರಶ್ನಿಸಿದಾಗ, ಅವರನ್ನು ತೆಗೆದುಹಾಕಲು ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.
"ಅರ್ಹರನ್ನು ತೆಗೆದುಹಾಕಬಾರದು. ಅನರ್ಹರನ್ನು ತೆಗೆದುಹಾಕಬೇಕು. ಅರ್ಹರನ್ನು ತೆಗೆದರೆ ಅವರನ್ನು ಮತ್ತು ಸೇರಿಸಬೇಕು" ಎಂದು ಅವರು ಹೇಳಿದರು.
Advertisement