
ಬೆಂಗಳೂರು: ಜಾತಿ ಗಣತಿ ಹೆಸರಿಲ್ಲಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಬಿರುಕು ಮೂಡಿಸುವ ಕುತಂತ್ರ ನಡೆಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಲಿಂಗಾಯತ ನಾಯಕರ ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ರಾಜ್ಯ ಸರ್ಕಾರ ನಡೆಸಿದ ಜಾತಿ ಸಮೀಕ್ಷೆಯ ಹೆಸರಿನಲ್ಲಿ ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯವನ್ನು ವಿಭಜಿಸುವ ಪ್ರಯತ್ನ ನಡೆಸುತ್ತಿದೆ. ಈಗ ಒಗ್ಗಟ್ಟಿನಿಂದ ನಿಲ್ಲದಿದ್ದರೆ, ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಹೇಳಿದರು.
ಜಾತಿ ಸಮೀಕ್ಷೆಯ ಕುರಿತು ಸರ್ವಾನುಮತದ ನಿರ್ಧಾರಕ್ಕೆ ಬರಲು ವೀರಶೈವ ಮಹಾಸಭಾದ ಪ್ರತಿನಿಧಿಗಳು, ಪಂಚ ಪೀಠಾದೀಶ್ವರರು ಮತ್ತು ವಿರಕ್ತ ಮಠಗಳ ಸ್ವಾಮೀಜಿಗಳನ್ನು ಭೇಟಿ ಮಾಡುವುದಾಗಿ ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ಸಮೀಕ್ಷೆಯಲ್ಲಿ 'ಇತರರು' ಸೇರ್ಪಡೆ ಸಂವಿಧಾನಬಾಹಿರ ಎಂದು ಹೇಳಿದರು.
ವೀರಶೈವ ಸಮುದಾಯವನ್ನು ವಿಭಜಿಸಲು ಜಾತಿ ಸಮೀಕ್ಷೆಯನ್ನು ವಿನ್ಯಾಸಗೊಳಿಸಲಾಗಿದೆ. ಸಿಎಂ ಸಿದ್ದರಾಮಯ್ಯ ತಮ್ಮ ಹಿಂದಿನ ಅವಧಿಯಲ್ಲಿ ಲಿಂಗಾಯತರನ್ನು ವಿಭಜಿಸುವ ಪ್ರಯತ್ನವನ್ನು ಮಾಡಿದ್ದರು. ಆದರೆ, ವಿಫಲರಾದರು ಇದೀಗ ಮತ್ತೆ ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆಂದು ಹೇಳಿದರು.
ಸಮುದಾಯದೊಳಗಿನ ಆಂತರಿಕ ಸಂಘರ್ಷಗಳನ್ನು ಪರಿಹರಿಸುವ, ಅದನ್ನು ಒಗ್ಗೂಡಿಸುವ, ರಾಜ್ಯದ ಕಲ್ಯಾಣಕ್ಕಾಗಿ ಸರಿಯಾದ ದಿಕ್ಕಿನಲ್ಲಿ ಮಾರ್ಗದರ್ಶನ ಮಾಡುವ ಅಗತ್ಯವನ್ನು ಅವರು ಒತ್ತಿ ಹೇಳಿದರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಕೇಂದ್ರ ಸರ್ಕಾರವು ಜನಗಣತಿಯನ್ನು ನಡೆಸುತ್ತದೆ. ರಾಜ್ಯ ಸರ್ಕಾರ ಸಮೀಕ್ಷೆ ನಡೆಸಬಹುದು, ಆದರೆ ಮನೆ-ಮನೆ ಸಮೀಕ್ಷೆ ನಡೆಸುವುದು ಜನಗಣತಿ ಕಾಯ್ದೆಗೆ ವಿರುದ್ಧವಾಗಿದೆ. ಸಂವಿಧಾನವು ಕೇವಲ ಆರು ಧರ್ಮಗಳನ್ನು ಮಾತ್ರ ಗುರುತಿಸುತ್ತದೆ. ಆದರೆ, ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ 'ಇತರರು' ಮತ್ತು 'ನಾಸ್ತಿಕರು' ನಂತಹ ವರ್ಗಗಳನ್ನು ಸೇರಿಸಿದೆ.
ನಾಸ್ತಿಕರಿಗೆ ಧರ್ಮ ಇಲ್ಲ. ಕ್ರಿಶ್ಚಿಯನ್ ಬ್ರಾಹ್ಮಣ, ಕ್ರಿಶ್ಚಿಯನ್ ಲಿಂಗಾಯತ ಅಂತ ಯಾಕೆ ಕಾಲಂ ಮಾಡಿದ್ದಾರೆ. ಮತಾಂತರ ಹೊಂದಿದವರಿಗೆ ಪ್ರತ್ಯೇಕ ಕಾಲಂ ಮಾಡಬೇಕು ಅಂತ ಯಾವ ಸಂವಿಧಾನದಲ್ಲಿ ಹೇಳಿದೆ. ಸಂವಿಧಾನದ ಬಗ್ಗೆ ಮಾತನಾಡುತ್ತ ಸಂವಿಧಾನ ವಿರೋಧಿ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಜಾತಿ ಸಮೀಕ್ಷೆಯಲ್ಲಿ ಬಹಳಷ್ಟು ಲೋಪಗಳಿವೆ ಎಂದು ಅನೇಕ ಸ್ವಾಮೀಜಿಗಳು ಹೇಳಿದ್ದಾರೆ. ಅವುಗಳನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ ಎಂದರು.
ವೀರಶೈವ ಲಿಂಗಾಯತ ಒಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ವೀರಶೈವ ಲಿಂಗಾಯತ ಸಮುದಾಯದ ಜನರು ಜಾಗೃತರಾಗಿದ್ದಾರೆ. ನಿಮ್ಮ ರಾಜಕೀಯ ಹುನ್ನಾರಕ್ಕೆ ಅವರು ಬಲಿಯಾಗುವುದಿಲ್ಲ. 2018 ರಲ್ಲಿ ಜನರು ಒಮ್ಮೆ ಪಾಠ ಕಲಿಸಿದ್ದಾರೆ. ನಮ್ಮ ಧರ್ಮ ಮತ್ತು ಸಮಾಜವನ್ನು ಒಡೆಯುವ ಕೆಲಸ ಮಾಡಬೇಡಿ ಎಂದು ಹೇಳಿದ್ದಾರೆ. ಈಗ ಮತ್ತೆ ಅದೆ ಕೆಲಸ ಮಾಡುತ್ತಿದ್ದಾರೆ. ಸಮಾಜ ಒಗ್ಗೂಡಿಸಿ ಆಡಳಿತ ಮಾಡುವುದನ್ನು ಬಿಟ್ಟು, ಸಮಾಜ ಒಡೆದು ತಮ್ಮ ರಾಜಕೀಯ ರೊಟ್ಟಿ ಸುಟ್ಡುಕೊಳ್ಳುವ ಕೆಲಸ ಮಾಡುತ್ತಿರುವುದನ್ನು ಜನರು ಸಂಪೂರ್ಣವಾಗಿ ತಿರಸ್ಕಾರ ಮಾಡುತ್ತಾರೆ ಎನ್ನುವ ವಿಶ್ವಾಸ ಇದೆ ಎಂದರು.
Advertisement