
ಬೆಂಗಳೂರು: ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.
ಕಾಮಾಕ್ಷಿಪಾಳ್ಯ ಸಮೀಪದ ನಿವಾಸಿ ಪ್ರಸನ್ನ ಅಲಿಯಾಸ್ ಚಂದ್ರು ಬಂಧಿತನಾಗಿದ್ದು, ಎರಡು ದಿನಗಳ ಹಿಂದೆ ತನ್ನ ಪತ್ನಿ ದೇವಿಕಾ ಮೇಲೆ ಹಲ್ಲೆ ನಡೆಸಿ ಚಂದ್ರು ಕೊಲೆಗೆ ಯತ್ನಿಸಿದ್ದ. ಈ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆರೋಪಿ ಬಂಧನವಾಗಿದೆ.
11 ವರ್ಷಗಳ ಹಿಂದೆ ಮಂಡ್ಯ ಜಿಲ್ಲೆನಾಗಮಂಗಲ ತಾಲೂಕಿನ ಚಂದ್ರು ಹಾಗೂ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ದೇವಿಕಾ ವಿವಾಹವಾಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯಿಂದ ಪ್ರತ್ಯೇಕವಾಗಿ ಲಿಂಗಧೀರನಹಳ್ಳಿಯ ಡಿಗ್ರೂಪ್ ಲೇಔಟ್ ನಲ್ಲಿ ದೇವಿಕಾ ವಾಸವಾಗಿದ್ದರು.
ಮದ್ಯ ಚಟ ಬೆಳೆಸಿಕೊಂಡಿದ್ದ ಆರೋಪಿ, ಪತ್ನಿಯ ಮೇಲೆ ಅನುಮಾನ ಹೊಂದಿದ್ದು, ಇದೇ ವಿಚಾರಕ್ಕೆ ಪತ್ನಿಯೊಂದಿಗೆ ಆಗಾಗ್ಗೆ ಜಗಳ ನಡೆಸುತ್ತಿದ್ದ ಎನ್ನಲಾಗಿದೆ. ಇದಲ್ಲದೆ ಪತ್ನಿಯ ಮಾರ್ಫ್ ಮಾಡಿದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದಾನೆ. ಚಿತ್ರಹಿಂಸೆ ತಾಳಲಾರದೆ ದೇವಿಕಾ ಅವರು ಪತಿಯಿಂದ ದೂರಾಗಿದ್ದರು. ಕಳೆದ ಎರಡು ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
ಖಾಸಗಿ ಆಸ್ಪತ್ರೆಯಲ್ಲಿ ದೇವಿಕಾ ನರ್ಸ್ ಆಗಿದ್ದರೆ, ಸಂಪ್ ಕ್ಲಿನರ್‌ಆಗಿ ಚಂದ್ರು ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಗುರುವಾರ ಘಟನೆ ನಡೆದಿದ್ದು, ದೇವಿಕಾ ಅವರು ಕೆಲಸಕ್ಕೆ ಹೋಗುತ್ತಿದ್ದಾಗ ಮೆಟ್ಟಿಲುಗಳ ಕೆಳಗೆ ಅಡಗಿಕೊಂಡಿದ್ದ ಆರೋಪಿ, ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಕಿರುಚಾಟ ಕೇಳಿ, ನೆಲ ಮಹಡಿಯಲ್ಲಿ ವಾಸಿಸುತ್ತಿದ್ದ ಮನೆ ಮಾಲೀಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸಂತ್ರಸ್ತೆ ಇದೀಗ ಪ್ರಾಣಾಪಾಯದಿಂದ ಪಾರಾಗಿದ್ದು, ದೂರು ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.
Advertisement