
ಮಂಡ್ಯ: ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ಬೆನ್ನಲ್ಲೇ ಕೃಷ್ಣರಾಜ ಸಾಗರ(KRS) ಜಲಾಶಯದ ಬಳಿ ಕನ್ನಡ ನಾಡಿನ ಜೀವನದಿಗೆ “ಕಾವೇರಿ ಆರತಿ” ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸೆಪ್ಟೆಂಬರ್ 26ರಿಂದ ಸೆಪ್ಟೆಂಬರ್ 30ರವರೆಗೆ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಂಗಳವಾರ ಮಾಹಿತಿ ನೀಡಿದ್ದಾರೆ.
ಸೆಪ್ಟೆಂಬರ್ 26 ರಂದು ಸಂಜೆ 5 ಗಂಟೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ವೀರ ಸಿಂಹಾಸನ ಮಹಾ ಸಂಸ್ಥಾನ ಮಠಾಧ್ಯಕ್ಷರಾದ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ, ಸಿದ್ಧಗಂಗಾ ಮಠದ ಅಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿಶ್ಚಲಾನಂದನಾಥ ಸ್ವಾಮೀಜಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ.
ಈ ಬಾರಿಯ ದಸರಾದಲ್ಲಿ ಸಾಂಕೇತಿಕವಾಗಿ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ ಕಾವೇರಿ ತಾಯಿಗೆ ಆರತಿ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
Advertisement