
ಬೆಂಗಳೂರು: ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಇಂದು ನಿಧನರಾದರು.
ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು. ಗೃಹ ಭಂಗ ಕಾದಂಬರಿ ಧಾರಾವಾಹಿಯಾಗಿದ್ದರೆ, ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ ಕಾದಂಬರಿಗಳು ಸಿನಿಮಾಗಳಾಗಿವೆ. ಇಂದಿಗೂ ಕೂಡ ಎಸ್ಎಲ್ ಭೈರಪ್ಪನವರ ಕೃತಿಗಳು ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿವೆ.
ಮೈಸೂರಿನಲ್ಲಿ ವಾಸವಿದ್ದ ಎಸ್ಎಲ್ ಬೈರಪ್ಪ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಎಸ್ಎಲ್ ಭೈರಪ್ಪ ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ ಭಾಷೆಗಳಿಗೆ ಅನುವಾದಗೊಂಡಿವೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ ಎಲ್ ಬೈರಪ್ಪ ನಿಧನರಾಗಿದ್ದಾರೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ 20-08-1931 ರಂದು ಹುಟ್ಟಿದ ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು. ಕಿತ್ತು ತಿನ್ನುವ ಬಡತನ, ಪ್ಲೇಗ್ ಮಾರಿಯಿಂದ ತತ್ತರಗೊಂಡ ಪರಿಸರದಲ್ಲೂ ಅವರ ಸಣ್ಣ ವಯಸ್ಸಿನಲ್ಲೇ ಅವರ ತಾಯಿಯ ಧೀಮಂತಿಕೆಯನ್ನು ಮೈಗೂಡಿಸಿಕೊಂಡರು.
ಅತ್ಯಂತ ಬಡತನದಲ್ಲೇ ಪ್ರೌಢ ಶಿಕ್ಷಣ ಹಾಗೂ ಕಾಲೇಜು ವ್ಯಾಸಂಗವನ್ನು ಮೈಸೂರಿನಲ್ಲಿ ಮುಂದುವರೆಸಿದ ಭೈರಪ್ಪನವರು ಎಂ.ಎ.ನಲ್ಲಿ ಸುವರ್ಣ ಪದಕದೊಂದಿಗೆ ತೇರ್ಗಡೆಯಾದರು. ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ "ಸತ್ಯ ಮತ್ತು ಸೌಂದರ್ಯ", ಎಂಬ ಇಂಗ್ಲಿಷ್‌ನಲ್ಲಿ ರಚಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಗಳಿಸಿದರು.
ಹುಬ್ಬಳ್ಳಿ, ಗುಜರಾತಿನ ಸರದಾರ್ ಪಟೇಲ್ ವಿಶ್ವ ವಿದ್ಯಾಲಯ, ದೆಹಲಿಗಳಲ್ಲಿ ತಮ್ಮ ಉಪನ್ಯಾಸಕ ವೃತ್ತಿ ಕೈಗೊಂಡ ಭೈರಪ್ಪನವರು, ಶಾಸ್ತ್ರಿಯ ಶಿಸ್ತಿನ ಓದಿನ ನಡುವೆ ಮಹತ್ವದ ಕಾದಂಬರಿಗಳನ್ನು ರಚಿಸಿದ್ದಾರೆ. 1961 ರಲ್ಲಿ `ಧರ್ಮಶ್ರೀ' ಕಾದಂಬರಿ ಪ್ರಕಟಿಸಿ ಇದುವರೆವಿಗೆ ನಾಲ್ಕು ದಶಕಗಳಲ್ಲಿ 21 ಕಾದಂಬರಿಗಳನ್ನು ಬರೆದಿದ್ದಾರೆ.
ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಮತದಾನ ಕಾದಂಬರಿಗಳು ಚಲನಚಿತ್ರವಾಗಿ ಪ್ರಶಸ್ತಿ ಗಳಿಸಿವೆ. ವಂಶವೃಕ್ಷಕ್ಕೆ 1966 ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1975ರಲ್ಲಿ ದಾಟು ಕಾದಂಬರಿಗೆ ರಾಜ್ಯ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. `ಪರ್ವ' ಭೈರಪ್ಪನವರು ರಚಿಸಿದ ಕಾದಂಬರಿಗಳಲ್ಲೇ ಭಾರೀ ಚರ್ಚೆಗೆ ಒಳಗಾದದ್ದು. ಮಹಾಭಾರತ ಕಾಲದ ಭಾರತೀಯ ಸಮಾಜದ ರೀತಿ ನೀತಿಗಳನ್ನೂ, ಆ ಕಾಲದ ಜೀವನ ಮೌಲ್ಯಗಳನ್ನು, ಮೃತ್ಯುವಿನ ರಹಸ್ಯಾತ್ಮಕತೆಯನ್ನು ಕಾದಂಬರಿಯಲ್ಲಿ ಅರ್ಥಪೂರ್ಣವಾಗಿ ಬಿಂಬಿಸಲಾಗಿದೆ.
Advertisement