
ಬೆಂಗಳೂರು: ಸೆ.22 ರಿಂದ ಶುರುವಾಗಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಗೆ (ಜಾತಿ ಗಣತಿ) ಸರ್ವರ್ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿದ್ದು, ಇದರಿಂದ ಸಮೀಕ್ಷೆಗೆ ಹಿನ್ನೆಡೆಯುಂಟಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಈ ಹಿನ್ನೆಲೆಯಲ್ಲಿ ಅಖಾಡಕ್ಕಿಳಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಾಗಿದ್ದು, ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚುರುಕು ಮುಟ್ಟಿಸಲಿದ್ದಾರೆ.
ಸಮೀಕ್ಷೆಯು ತಾಂತ್ರಿಕ ದೋಷಗಳು, ಗಣತಿದಾರರಿಗೆ ತರಬೇತಿಯ ಕೊರತೆ ಮುಂತಾದ ಸಮಸ್ಯೆಗಳಿಂದ ಕೂಡಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಬೆಳಿಗ್ಗೆ 11.30 ಕ್ಕೆ ರಾಜ್ಯದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ಗಳ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ (ವಿಸಿ) ನಡೆಸಲಿದ್ದಾರೆ.
ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಜಾತಿಗಣತಿಯಲ್ಲಿ ಉಂಟಾಗುತ್ತಿರುವ ಲೋಪಗಳ ಕುರಿತು ರಾಜ್ಯ ಸರ್ಕಾರ ವಿಸ್ತೃತವಾಗಿ ಚರ್ಚೆ ನಡೆಸಿದ್ದು, ಸಮೀಕ್ಷೆಗೆ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ, ಖುದ್ದು ಮುಖ್ಯಮಂತ್ರಿಗಳೇ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.
ಇದೇ ವೇಳೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಹ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಬೆಂಗಳೂರು ವ್ಯಾಪ್ತಿಯಲ್ಲಿ ಜವಾಬ್ದಾರಿ ನಿಭಾಯಿಸದ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಅಧಿಕಾರ ನೀಡಲಾಗಿದೆ.
ಸಮೀಕ್ಷೆ ಆರಂಭವಾಗಿ 4 ದಿನಗಳಾದರೂ ಸಮಸ್ಯೆಗಳು ಸಂಪೂರ್ಣ ಬಗೆಹರಿದಿಲ್ಲ. ಈ ರೀತಿ ಆದರೆ ಅ.7ರ ವೇಳೆಗೆ ಸಮೀಕ್ಷೆ ಮುಗಿಸುವುದು ಅಸಾಧ್ಯ. ಹೀಗಾಗಿ ಶುಕ್ರವಾರ ಬೆಳಗ್ಗೆ ವಿಡಿಯೋ ಸಂವಾದದ ಮೂಲಕ ಡೀಸಿ, ಜಿಪಂ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್ ಅವರು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸೂಕ್ತ ನಿರ್ದೇಶನ ನೀಡಲು ಶುಕ್ರವಾರ ಬೆಳಗ್ಗೆ 11.30 ಗಂಟೆಗೆ ಸಿಎಂ ಸಭೆ ನಡೆಸಲಿದ್ದಾರೆ. ಸಮೀಕ್ಷೆಗೆ ವೇಗ ನೀಡುವಂತೆ ತಾಕೀತು ಮಾಡಲಿದ್ದಾರೆ ಎಂದು ಹೇಳಿದರು.
ಇನ್ನು ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಶಿಸ್ತುಕ್ರಮ ಮತ್ತು ದಂಡ ವಿಧಿಸುವ ಅಧಿಕಾರ ಹೊಂದಿದ್ದಾರೆ ಎಂದೂ ಸಚಿವರು ತಿಳಿಸಿದರು.
Advertisement