
ಬೆಂಗಳೂರು: ಹಿಂದೂಗಳ ವಿರುದ್ಧ ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಪರಿಸ್ಥಿತಿಗೆ ನೀವೇ ಕಾರಣರಾಗುತ್ತೀರಿ ಎಂದು ಪೊಲೀಸರಿಗೆ ಬಿಜೆಪಿ ಶುಕ್ರವಾರ ಎಚ್ಚರಿಕೆ ನೀಡಿದೆ.
ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮದಿನದ ಪ್ರಯುಕ್ತ ನಡೆಯುತ್ತಿರುವ ಈದ್ ಮಿಲಾದ್ ಹಬ್ಬ , ಮೆವರಣಿಗೆ ಸಂದರ್ಭದಲ್ಲಿ ಅಳವಡಿಸಲಾಗಿದ್ದ, ಐ ಲವ್ ಮೊಹಮ್ಮದ್ ಪೋಸ್ಟರ್ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಿಂದೂ ಸಮುದಾಯದ ಮೇಲಿನ ಕೋಮುವಾದಿ ದುಷ್ಟರ ದಾಳಿ ಸರಣೀ ರೂಪದಲ್ಲಿ ಮುಂದುವರೆಯುತ್ತಲೇ ಇದೆ. ನಿನ್ನೆ ದಾವಣಗೆರೆಯಲ್ಲಿ ಕೋಮು ಉದ್ವಿಗ್ನತೆ ಪ್ರಚೋದಿಸುವ ಬ್ಯಾನರ್ ಅಳವಡಿಸಿ ಹಿಂದೂ ಸಮುದಾಯದ ಮನೆಗಳನ್ನು ಟಾರ್ಗೆಟ್ ಮಾಡಿ ಕಲ್ಲು ತೂರಾಟ ನಡೆಸಿ ಆತಂಕಮಯ ವಾತಾವರಣ ಸೃಷ್ಟಿಸಿ ಹಿಂದುಗಳ ಮೇಲೆ ದೌರ್ಜನ್ಯ ಎಸಗಿರುವ ಘಟನೆ ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.
ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸಿ ಭಯಗ್ರಸ್ತ ವಾತಾವರಣ ಉಂಟುಮಾಡಿದ ಮುಸ್ಲಿಂ ಕೋಮುವಾದಿ ದುಷ್ಕರ್ಮಿಗಳನ್ನು ಪೊಲೀಸರು ಈ ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಲಿ. ದೇಶದ ಹಲವೆಡೆಗಳಲ್ಲಿ "ಐ ಲವ್ ಮೊಹಮ್ಮದ್" ಎಂಬ ಬ್ಯಾನರ್ ಅಳವಡಿಸಿ ಹಿಂದೂಗಳನ್ನು ಪ್ರಚೋದಿಸಲೆಂದೇ ವಿವಾದ ಹುಟ್ಟುಹಾಕಲಾಗಿದ್ದು, ಇದು ದಾವಣಗೆರೆ ಮೂಲಕ ರಾಜ್ಯವನ್ನೂ ಪ್ರವೇಶಿಸಿದೆ.
ಪೋಲಿಸ್ ಇಲಾಖೆ ಅತ್ಯಂತ ಗಂಭೀರವಾಗಿ ಈ ಘಟನೆಯನ್ನು ಪರಿಗಣಿಸಿ ಕೋಮುವಾದಿ ದುಷ್ಟರ ಅಟ್ಟಹಾಸ ರಾಜ್ಯದ ಇತರೆಡೆಗಳಲ್ಲೂ ಪಸರಿಸದಂತೆ ಈ ಕೂಡಲೇ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿದೆ. ದಾವಣಗೆರೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಮನೆಗಳ ಮೇಲೆ ಕಲ್ಲುತೂರಾಟ ನಡೆಸಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಸಿರುವ ದುಷ್ಟರ ವಿರುದ್ಧ ಕಠಿಣ ಕ್ರಮ ಜರುಗಿಸದೇ ಹೋದರೆ ಪರಿಸ್ಥಿತಿ ಗಂಭೀರ ತಿರುವು ಪಡೆಯಲು ಪೊಲೀಸರೇ ಕಾರಣರಾಗುತ್ತಾರೆ ಎಂದು ಎಚ್ಚರಿಸಿದ್ದಾರೆ.
Advertisement